*ಕೇಂದ್ರದ ವಿರುದ್ಧ ಅಕ್ಕಿ ಬುಟ್ಟಿ ಹಿಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ವಿನೂತನ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೈಯಲ್ಲಿ ಅಕ್ಕಿ ಬುಟ್ಟಿ ಹಿಡಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲು ನಿರಾಕರಿಸಿರುವುದು ಖಂಡನೀಯ ಎಂದು ಕಿಡಿಕಾರಿದರು.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆಅವಣಿಗೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಜನರಿಗೆ ನಾವು ನೀಡಿದ್ದ 5 ಗ್ಯಾರಂಟಿ ಭರವಸೆಯನ್ನು ಈಡೇರಿಸುತ್ತೇವೆ. ಪ್ರಮುಖವಾಗಿ ಅನ್ನಭಾಗ್ಯ ಯೋಜನೆಯಡಿ 10ಕೆ ಜಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಆರಂಭದಲ್ಲಿ ಅಕ್ಕಿ ವಿತರಣೆ ಮಾಡುವುದಾಗಿ ಎಫ್ ಸಿಐ ನಂತರ ಅಕ್ಕಿ ನಂತರ ಅಕ್ಕಿ ನೀಡಲು ಆಗಲ್ಲ ಎಂದಿದೆ. ಬಡವರಿಗೆ ಕೊಡಬೇಕಾದ ಅಕ್ಕಿಯನ್ನು ಕೇಂದ್ರ ಸರ್ಕಾರ ಓಪನ್ ಮಾರುಕಟ್ಟೆಯಲ್ಲಿ ಮಾರಲು 15 ಲಕ್ಷ ಟನ್ ನೀಡಿದೆ. ಬಡವರ ಪರವಾಗಿ, ಜನ ಪರ ಸರ್ಕಾರದ ಎಂದು ಹೇಳುವ ಕೇಂದ್ರ ಸರ್ಕಾರದ ಈ ನಡೆ ಖಂಡನೀಯ ಎಂದು ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ಅಕ್ಕಿ ವಿತರಣೆಗೆ ತಡೆ ನೀಡಿದ್ದು, ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು. ಬಡವರ ಊಟಕ್ಕಾಗಿ ಅಕ್ಕಿ ನೀಡುವ ವಿಚಾರದಲ್ಲಿಯೂ ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟಿಸುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಮೃಣಾಲ್ ಹೆಬ್ಬಾಳ್ಕರ್, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಶಾಸಕ ರಾಜು ಸೇಠ್, ಪಾಲಿಕೆ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ