Belagavi NewsBelgaum NewsKannada NewsKarnataka NewsLatest

*ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 215 ಕೋಟಿ ರೂ. ಯೋಜನೆಗೆ ಚಾಲನೆ*

ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 215 ಕೋಟಿ ರೂ. ಯೋಜನೆಗೆ ಚಾಲನೆ

ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಪ್ರಾಧಿಕಾರ ರಚನೆ; ಭಕ್ತರಿಗೆ ವಿಶ್ವದರ್ಜೆಯ ಮೂಲಸೌಕರ್ಯ ಕಲ್ಪಿಸಲು ಕ್ರಮ: ಸಿಎಂ. ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರವಾದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ 215 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸಲು ವಿಶೇಷ ಪ್ರಾಧಿಕಾರ ರಚಿಸಲಾಗಿದ್ದು, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕ್ಷೇತ್ರವನ್ನು ಪ್ರಮುಖ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ, ಮುಜರಾಯಿ ಇಲಾಖೆ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಯಲ್ಲಮ್ಮ ದೇವಿಯ ಮೇಲಿನ ಭಕ್ತಿಯು ರಾಜ್ಯದ ಗಡಿಗಳನ್ನು ಮೀರಿ ವ್ಯಾಪಿಸಿದೆ. ಈ ಕ್ಷೇತ್ರದ ಧಾರ್ಮಿಕ ಮಹತ್ವ, ಪರಂಪರೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲ ಭಕ್ತರ ಹಾಗೂ ಸರ್ಕಾರದ ಮೇಲಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಲಾಗಿದೆ. ದೇವಾಲಯಗಳಲ್ಲಿರುವ ಚಿನ್ನಾಭರಣಗಳನ್ನು ಭಕ್ತರಿಗೆ ದೇವರ ಅಲಂಕಾರ ಹಾಗೂ ದರ್ಶನದ ಆಕರ್ಷಣೆಗೆ ಅನುಕೂಲವಾಗುವಂತೆ ಸದ್ಬಳಕೆ ಮಾಡುವ ಕುರಿತು ವಿಶೇಷ ಯೋಜನೆ ರೂಪಿಸುವ ಚಿಂತನೆ ಇದೆ ಎಂದರು.

ಸರ್ಕಾರಕ್ಕೆ ಜನರೇ ದೇವರು, ಜನರ ಸೇವೆಯೇ ದೇವರ ಸೇವೆ ಎಂಬ ಆಶಯದೊಂದಿಗೆ ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ನೆರವು ನೀಡಲಾಗುತ್ತಿದೆ. ಬಡ ರೈತರು, ಮಹಿಳೆಯರು ಹಾಗೂ ಯುವಜನರ ಸಬಲೀಕರಣಕ್ಕೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಮೂರು ಎಕರೆವರೆಗೆ ಕೃಷಿ ಭೂಮಿ ಹೊಂದಿರುವ ಬಡ ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿಕೊಡುವ ‘ನೇಗಿಲ ಯೋಗಿ’ ಯೋಜನೆ, ಆಸ್ತಿ ಮತ್ತು ಭೂ ದಾಖಲೆಗಳ ಸರಳೀಕರಣಕ್ಕಾಗಿ ‘ಆಸ್ತಿ ಗ್ಯಾರಂಟಿ’ ಹಾಗೂ ‘ಭೂಮಿ ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಸವದತ್ತಿ ಪುರಸಭೆಯ ಅಭಿವೃದ್ಧಿಗೆ 45 ಕೋಟಿ ರೂ. ಅನುದಾನ ನೀಡಲಾಗಿದ್ದು, 100 ಹಾಸಿಗೆಗಳ ಆಸ್ಪತ್ರೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಕೆರೆ ತುಂಬಿಸುವ ಯೋಜನೆಗಳು ಹಾಗೂ ರೈತರ ಅನುಕೂಲಕ್ಕಾಗಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಯುವಜನರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀಡೆ ಮತ್ತು ಕಲಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸಹೋದರತ್ವದಿಂದ ಬದುಕಿ, ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಟೆಂಪಲ್ ಟೂರಿಸಂ ಕಾರಿಡಾರ್ ನಿರ್ಮಾಣಕ್ಕೆ ಪ್ರಸ್ತಾವನೆ: 

ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಸವದತ್ತಿ ಯಲ್ಲಮ್ಮ ದೇವಸ್ಥಾನವು ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತವಾಗಿರದೆ ದೇಶದ ವಿವಿಧ ಭಾಗಗಳ ಭಕ್ತರ ಶ್ರದ್ಧೆಗೆ ಪಾತ್ರವಾಗಿದೆ. ಈ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನುದಾನ ಒದಗಿಸಲಾಗುತ್ತಿದೆ. ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಜರಾಯಿ ಇಲಾಖೆಯಿಂದ 97 ಕೋಟಿ ರೂ. ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿದ್ದು, ಅವುಗಳ ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ‘ಟೆಂಪಲ್ ಟೂರಿಸಂ ಕಾರಿಡಾರ್’ ನಿರ್ಮಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ. ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ, ಕೊಕಟನೂರು ಯಲ್ಲಮ್ಮ ಸುಳೇಭಾವಿ ಮಹಾಲಕ್ಷ್ಮೀ ಸೇರಿದಂತೆ ವಿವಿಧ ಶಕ್ತಿ ದೇವತೆಗಳ ಕ್ಷೇತ್ರಗಳನ್ನು ಸಂಪರ್ಕಿಸುವ ಮೂಲಕ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬಹುದು. ಇದರಿಂದ ಉತ್ತರ ಕರ್ನಾಟಕದ ಪ್ರವಾಸೋದ್ಯಮ ಹಾಗೂ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬೆಳಗಾವಿ–ಕಿತ್ತೂರು–ಧಾರವಾಡ ರೈಲ್ವೆ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಶೇ.99ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 1,960 ಕೋಟಿ ರೂ. ವೆಚ್ಚದ ಈ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಬಾಕಿ ಇರುವ 50 ಕೋಟಿ ರೂ. ಪರಿಹಾರ ಮೊತ್ತವನ್ನು ಬಿಡುಗಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ರೈಲ್ವೆ ಮಾರ್ಗ ಪೂರ್ಣಗೊಂಡರೆ ಈ ಭಾಗದ ಜನರಿಗೆ ಪ್ರಯಾಣದ ಅನುಕೂಲ ಹೆಚ್ಚಲಿದೆ ಎಂದು ಹೇಳಿದರು.

ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ: 

ಶಾಸಕ ಎಚ್.ಕೆ. ಪಾಟೀಲ್ ಮಾತನಾಡಿ, ಯಾವುದೇ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಅತ್ಯಗತ್ಯ. ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಪ್ರತಿ ವರ್ಷ ಕೋಟ್ಯಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ, ಭಕ್ತರಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

215 ಕೋಟಿ ರೂ. ವೆಚ್ಚದ ಯೋಜನೆಯು ಕ್ಷೇತ್ರದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ. ಭಕ್ತರು ಬಿಸಿಲಿನಲ್ಲಿ ದೀರ್ಘಕಾಲ ಕಾಯುವುದನ್ನು ತಪ್ಪಿಸಲು ವ್ಯವಸ್ಥಿತ ಸರತಿ ಸಾಲಿನ ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ನಿರ್ಮಿಸಲಾಗುವುದು. ವೃದ್ಧರು, ಮಹಿಳೆಯರು ಹಾಗೂ ವಿಶೇಷಚೇತನರು ಸುಲಭವಾಗಿ ದೇವಿಯ ದರ್ಶನ ಪಡೆಯಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಒಂದೇ ಬಾರಿಗೆ ಸುಮಾರು 6 ಸಾವಿರ ಜನರು ಕುಳಿತು ಊಟ ಮಾಡಲು ಅನುಕೂಲವಾಗುವ ಬೃಹತ್ ಅನ್ನದಾಸೋಹ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರ ಜಾನುವಾರುಗಳಿಗೆ ಮೇವು ಒದಗಿಸುವ ‘ಮೇವು ದಾಸೋಹ’ ವ್ಯವಸ್ಥೆಗೂ ಆದ್ಯತೆ ನೀಡಲಾಗುತ್ತಿದೆ. ಭಕ್ತರ ಆರೋಗ್ಯ, ಸ್ವಚ್ಛತೆ ಹಾಗೂ ಶಿಸ್ತಿನ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಉತ್ತರ ಕರ್ನಾಟಕದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ನೀಡಿದರೆ ಈ ಕ್ಷೇತ್ರವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದ ಸಹಕಾರ: 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಸಹಕಾರದಿಂದ ಮಹತ್ವದ ಯೋಜನೆಗಳಿಗೆ ಚಾಲನೆ ದೊರೆತಿರುವುದು ಸಂತಸ ತಂದಿದೆ. ಜಾತಿ, ಧರ್ಮ ಹಾಗೂ ಪಂಥದ ಭೇದವಿಲ್ಲದೆ ಎಲ್ಲ ಸಮುದಾಯಗಳ ಜನರು ಆಗಮಿಸುವ ಈ ಕ್ಷೇತ್ರಕ್ಕೆ ಹೆಚ್ಚಿನ ಮೂಲಸೌಕರ್ಯಗಳ ಅಗತ್ಯವಿದೆ ಎಂದು ಹೇಳಿದರು.

ಸವದತ್ತಿ ಹಾಗೂ ಬೈಲಹೊಂಗಲ ತಾಲೂಕುಗಳಲ್ಲಿ ನೀರಿನ ಸಮಸ್ಯೆ ನಿವಾರಿಸಲು ಕೆರೆ ತುಂಬಿಸುವ ಯೋಜನೆಗಳನ್ನು ತ್ವರಿತಗೊಳಿಸಬೇಕು. ಮಲಪ್ರಭಾ ನದಿಯ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ರೈತರಿಗೆ ಅನುಕೂಲ ಕಲ್ಪಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕ್ಷೇತ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಶ್ರಮಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ, ಪ್ರವಾಸೋದ್ಯಮ ಇಲಾಖೆ ಆಯುಕ್ತ ಶಿವಪ್ರಸಾದ್ ಪಿ.ಆರ್., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ರಾಮ್ ಪ್ರತಾಪ್ ಮನೋಹರ್, ಲೋಕೋಪಯೋಗಿ ಇಲಾಖೆ ಬೆಳಗಾವಿ ವೃತ್ತದ ಅಧೀಕ್ಷಕ ಎಂಜಿನಿಯರ್ ಸಂಜೀವಕುಮಾರ ಹುಲಕಾಯಿ, ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಾಜಶ್ರೀ ಜೈನಾಪುರ ಅವರು ಸ್ವಾಗತಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button