
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲಿಂಗಾಯತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಬೇಕೆಂದು ರಾಜ್ಯ ಬಿಜೆಪಿ ವಕ್ತಾರ ಎಮ್.ಬಿ.ಜೀರಲಿ ಆಗ್ರಹಿಸಿದರು.
ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳಾಗಿ, ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯನವರು ವೃತ್ತಿಯಲ್ಲಿ ವಕೀಲರಾಗಿದ್ದುರೂ ಟೀಕೆಮಾಡುವ ಭರದಲ್ಲಿ ಜಾತಿಯ ಆಧಾರದ ಮೇಲೆ ಅದರಲ್ಲೂ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟಾಚಾರಿ ಎಂದು ಟೀಕೆ ಮಾಡಿರುವುದು ಲಿಂಗಾಯತರಿಗೆ ನೋವು ತಂದಿದೆ. ಕಾಂಗ್ರೆಸ್ ಪಕ್ಷ ಕಳೆದ 25 ವರ್ಷದಲ್ಲಿ ಯಾವ ಲಿಂಗಾಯತ ನಾಯಕರಿಗೂ ಮುಖ್ಯಮಂತ್ರಿ ಸ್ಥಾನ ಕೊಟ್ಟಿಲ್ಲ. ಬಿಜೆಪಿಯಲ್ಲಿ 5 ಜನ ಮುಖ್ಯಮಂತ್ರಿಯಾದರೆ ಅದರಲ್ಲಿ ನಾಲ್ಕು ಜನ ಲಿಂಗಾಯತರೆ ಮುಖ್ಯಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಒಳಬೇಗುದಿ ಹಾಗೂ ಅವರು ಲಿಂಗಾಯತರ ಬಗ್ಗೆ ಹೊಂದಿದ ಮನೋಭಾವನೆಯನ್ನು ಸಿದ್ದರಾಮಯ್ಯನವರ ಮುಖಾಂತರ ಅಡಿಸುತ್ತಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿ, ಕ್ಷಮೆಯಾಚಿಸುವಂತೆ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಜಿಲ್ಲಾಧ್ಯಕ್ಷ ಶಾಸಕ ಅನೀಲ ಬೆನಕೆ, ಜಿಲ್ಲಾ ಮಾಧ್ಯಮ ಸಂಚಾಲಕ ಎಫ್.ಎಸ್.ಸಿದ್ದನಗೌಡರ, ಶರದ ಪಾಟೀಲ್ ಹಾಗೂ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಾದಾಗೌಡ ಬಿರಾದಾರ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ