Kannada NewsKarnataka NewsLatest

*ಮಹಿಳೆಯರಿಗೆ ಶೇ.50ರಷ್ಟು ಮೀಸಲು ಪ್ರಸ್ತಾವನೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* ; *ಲೋಕಸಭಾ ಚುನಾವಣಾ ಪ್ರಣಾಳಿಕೆ ಪೂರ್ವಭಾವಿ ಸಭೆ* 

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು* : ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ  ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನ ಗೃಹ ಕಚೇರಿಯಲ್ಲಿ ಗುರುವಾರ, ಮುಂಬರುವ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ; ಆದರೆ; ಇನ್ನೂ ಅನುಷ್ಠಾನಗೊಂಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಮಸೂದೆಯನ್ನು ಜಾರಿಗೊಳಿಸಲಾಗುವುದು ಎಂದರು.

ಸರ್ಕಾರಿ ಉದ್ಯೋಗದಲ್ಲಿ ಶೇಕಡ 50ರಷ್ಟು ಮೀಸಲಾತಿ ಜಾರಿಗೆ ತರುವ ಉದ್ದೇಶ ಹೊಂದಲಾಗಿದೆ. ಇದು ಕೆಳಮಟ್ಟದಿಂದ ಮೇಲ್ಮಟ್ಟದವರೆಗೂ ಮೀಸಲಾತಿ ಕಲ್ಪಿಸುವ ಆಶಯವಾಗಿದೆ. ಸರ್ಕಾರಿ ಉದ್ಯೋಗ ಮಾತ್ರವಲ್ಲ; ಖಾಸಗಿ ಕಂಪನಿಗಳಲ್ಲೂ ಶೇಕಡ 50ರಷ್ಟು ಮಹಿಳೆಯರಿಗೆ ಉದ್ಯೋಗ ಮೀಸಲಾತಿ ಬಗ್ಗೆಯೂ ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕರ್ನಾಟಕದಲ್ಲಿ ಈಗಾಗಲೇ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಗೃಹಲಕ್ಷ್ಮಿ ಯೋಜನೆ ರಾಷ್ಟ್ರ ಮಟ್ಟದಲ್ಲೂ ಜಾರಿ ಆಗಬೇಕೆಂದು ಎಲ್ಲರ ಆಶಯವಾಗಿದೆ. ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಸೇರ್ಪಡೆಗೊಳಿಸುವ ಸಂಬಂಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು.

ಇದೇ ತಿಂಗಳ 10ರಂದು ಬೆಂಗಳೂರಿನಲ್ಲಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರು ಹಾಗೂ ಕೇಂದ್ರ ಮಾಜಿ ವಿತ್ತ ಸಚಿವರೂ ಆದ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಹಿಳೆಯರ ಸಬಲೀಕರಣ, ರಾಜಕೀಯ ಮೀಸಲಾತಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್,  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಉಪಾಧ್ಯಕ್ಷೆ ಡಾ. ನಾಗಲಕ್ಷ್ಮೀ,  ಎನ್ ಎಸ್ ಯುಐ ಮಾಜಿ ಅಧ್ಯಕ್ಷೆ ರುಚಿತ್ ಗುಪ್ತಾ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್,  ಅಂಗನವಾಡಿ ಕಾರ್ಯಕರ್ತರ ಸಂಘಟನೆಯ ಪ್ರೇಮಾ, ಮಮತಾ ರೆಡ್ಡಿ ಉಪಸ್ಥಿತರಿದ್ದರು.

Related Articles

Back to top button