ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ನಾಳೆಯಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ವಿಪಕ್ಷಗಳ ಮಹಾ ಮತ್ರಿಕೂಟ ಸಭೆಗೆ ಜೆಡಿಎಸ್ ಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ.
ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಹಾ ಮತ್ರಿಕೂಟ ಪಕ್ಷಗಳ ಸಭೆ ನಡೆಯಲಿದ್ದು,ಲೋಕಸಭಾ ಚುನಾವಣೆಗೆ ಸಿದ್ಧತೆ ನಿಟ್ಟಿನಲ್ಲಿ ವಿಪಕ್ಷ ನಾಯಕರು ಮಹತ್ವದ ಚರ್ಚೆ ನಡೆಸಲಿದ್ದಾರೆ. ಆದರೆ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಸಭೆಗೆ ಗೈರಾಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾತುಕತೆ ಹಿನ್ನೆಲೆಯಲ್ಲಿ ಸಭೆಗೆ ಅಧಿಕೃತ ಆಹ್ವಾನ ನೀಡಿಲ್ಲ ಎಂದು ಹೇಳಲಾಗುತ್ತಿದೆ.
ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಾಳೆ ದೆಹಲಿಗೆ ತೆರಳಲಿದ್ದಾರೆ. ಜುಲೈ 18ರಂದು ಎನ್ ಡಿಎ ನಾಯಕರ ಸಭೆ ನಡೆಯಲಿದ್ದು, ಸಭೆಗೂ ಮುನ್ನ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತು ಕತೆ ನಡೆಸಿರುವ ಕುಮಾರಸ್ವಾಮಿ, ಎನ್ ಡಿಎ ಸಭೆಗೂ ಮುನ್ನ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಎನ್ ಡಿಎ ಸಭೆಯಲ್ಲಿಯೂ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಇದು ವರಿಷ್ಠರಿಗೆ ಬಿಟ್ಟ ನಿರ್ಧಾರ. ಈಗಾಗಲೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬಿಜೆಪಿ ವರಿಷ್ಠರ ಜೊತೆ ಚರ್ಚೆ ನಡೆಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಕೆಲ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಬಹುತೇಕ ಖಚಿತವಾಗಿದ್ದು, ಆ ನಿಟ್ಟಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಕುಮಾರಸ್ವಾಮಿ ದೆಹಲಿ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ