ಪ್ರಗತಿವಾಹಿನಿ ಸುದ್ದಿ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದ 543 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಈ ನಡುವೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಖಡಕ್ ಸೂಚನೆಯನ್ನು ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಸುಳ್ಳು ಸುದ್ದಿಗಳನ್ನು ಪ್ರಕಟಿಸುವಂತಿಲ್ಲ. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ. ಯಾವುದೇ ಪಕ್ಷದ ಜಾಹೀರಾತುಗಳನ್ನು ಸುದ್ದಿಯಾಗಿ ನೀಡುವಂತಿಲ್ಲ. ಪ್ರತಿಸ್ಪರ್ಧಿಗಳನ್ನು ನಿಂದಿಸುವ ಅವಮಾನಿಸುವ ಸಾಮಾಜಿಕ ಮಾಧ್ಯಮದ ಪೋಸ್ಟ್ ಗಳ ಮೇಲೆ ನಿರ್ಬಂಧ ಹೇರಲಾಗುವುದು ಎಂದು ಎಚ್ಚರಿಸಿದ್ದಾರೆ.
ಇನ್ನು ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ದ್ವೇಷ ಭಾಷಣ ಮಾಡುವಂತಿಲ್ಲ, ಶತ್ರುಗಳ ರೀತಿ ವರ್ತಿಸಲು ಅವಕಾಶವಿಲ್ಲ. ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ.ವಿಷಯಾಧಾರಿತ ಮಾತುಗಳನ್ನು ಆಡಬೇಕು. ದ್ವೇಷ ಭಾಷಣ, ಯಾವುದೇ ಜಾತಿ, ಧರ್ಮ, ಧಾರ್ಮಿಕ ವಿಷಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುವಂತಿಲ್ಲ. ಖಾಸಗಿ ಜೀವನದ ಅಂಶಗಳನ್ನು ಮುಂದಿಟ್ಟು ಟೀಕಿಸುವಂತಿಲ್ಲ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ. ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರು ತಮ್ಮ ಗೌರವ ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ