*ಸಚಿವ ಜಮೀರ್ ಆಪ್ತ ಸೇರಿ 10 ಕಡೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸ್*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಬೆಂಗಳೂರಿನ ಹಲಸೂರಲ್ಲಿರುವ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ಐದು ಮನೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿರುವ ಮನೆಗಳು ಮತ್ತು ರೆಸಾರ್ಟ್‌ಗಳ ಮೇಲೂ ದಾಳಿ ನಡೆಸಲಾಗಿದ್ದು, ಅಗತ್ಯ ದಾಖಲೆಗಳನ್ನು ಹಾಗೂ ಆಸ್ತಿ ವಿವರಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸರಿಂದ ಮಹತ್ವದ ದಾಖಲೆಗಳು, ಹಣಕಾಸು ವ್ಯವಹಾರಗಳ ದಾಖಲೆಗಳು ಮತ್ತು ಆಸ್ತಿ ಸಂಬಂಧಿತ ಕಾಗದಗಳ ಪರಿಶೀಲನೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.




