Kannada NewsLatestNational

*ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಜನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರ ಕೈಪಮಂಗಲಂ ಸಮೀಪದ ಪಣಂಬಿಕ್ಕುನ್ನು ಎಂಬಲ್ಲಿ ಈ ದುರಂತ ಸಂಭವಿಸಿದ್ದು, ಮೃತರೆಲ್ಲರೂ ತಮಿಳುನಾಡು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ತಮಿಳುನಾಡಿನಿಂದ ಕೇರಳ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ತಂಡ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ದರ್ಶನ ಮುಗಿಸಿ ಕೊಡುಂಗಲ್ಲೂರು ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು 11.40 ರ ವೇಳೆಗೆ ಪಣಂಬಿಕ್ಕುನ್ನು ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಅತಿವೇಗದಲ್ಲಿ ಬಂದು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಲಾರಿಯ ಕೆಳಭಾಗಕ್ಕೆ ನುಗ್ಗಿದೆ. ಕಾರಿನಲ್ಲಿದ್ದ ಎಂಟೂ ಮಂದಿ ಗಂಭೀರ ರಕ್ತಸ್ರಾವದಿಂದ ವಾಹನದ ಒಳಗಡೆಯೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಸಾರ್ವಜನಿಕರು ಹರಸಾಹಸಪಟ್ಟು, ಗ್ಯಾಸ್ ಕಟ್ಟರ್ ಬಳಸಿ ವಾಹನದ ಬಿಡಿಭಾಗಗಳನ್ನು ಕತ್ತರಿಸಿ ಶವಗಳನ್ನು ಹೊರತೆಗೆದಿದ್ದಾರೆ.

ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button