Belagavi NewsBelgaum NewsKarnataka NewsLatestPolitics

*ಸುಳೇಭಾವಿಯಲ್ಲಿ ‘ವೀರ ಮದಕರಿ ನಾಯಕ’ ಭವ್ಯ ಪ್ರತಿಮೆ ನಿರ್ಮಾಣಕ್ಕೆ ಚಾಲನೆ*

ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ₹20 ಲಕ್ಷ ವೆಚ್ಚದಲ್ಲಿ ಕಾಮಗಾರಿ; ಇತಿಹಾಸ, ಸಂಸ್ಕೃತಿ ಉಳಿಸುವ ಕಾರ್ಯಕ್ಕೆ ಆದ್ಯತೆ


ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ನೇತೃತ್ವದ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಸುಳೇಭಾವಿ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವೀರ ಮದಕರಿ ನಾಯಕ ಅವರ ಭವ್ಯ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಗುರುವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.

ಈ ಮಹತ್ವದ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ವೀರ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ವಿವಿಧ ಸಮಾಜಗಳ ಮಹನೀಯರ ಪ್ರತಿಮೆಗಳನ್ನು ನಿರ್ಮಿಸಿ, ಅವರ ಆದರ್ಶ ಬದುಕು ಹಾಗೂ ನಿಸ್ವಾರ್ಥ ಸೇವೆಯನ್ನು ಜನರಿಗೆ ಪರಿಚಯಿಸುವ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತ್ತಿದೆ ಎಂದು ಹೇಳಿದರು.

Home add -Advt

ವೀರ ಮದಕರಿ ನಾಯಕರು ತಮ್ಮ ಶೌರ್ಯ, ಸ್ವಾಭಿಮಾನ ಮತ್ತು ದೇಶಭಕ್ತಿಯಿಂದ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವಗಳ ಸ್ಮರಣೆ ಶಾಶ್ವತವಾಗಿರಬೇಕು ಎಂಬ ಆಶಯದಿಂದ ಈ ಪ್ರತಿಮೆ ನಿರ್ಮಿಸಲಾಗುತ್ತಿದೆ. ಇದು ಕೇವಲ ಒಂದು ಪ್ರತಿಮೆ ನಿರ್ಮಾಣವಲ್ಲ, ಮುಂದಿನ ಪೀಳಿಗೆಗೆ ನಮ್ಮ ಇತಿಹಾಸ ಮತ್ತು ವೀರಗಾಥೆಗಳನ್ನು ಪರಿಚಯಿಸುವ ಸಾಂಸ್ಕೃತಿಕ ಕಾರ್ಯವಾಗಿದೆ ಎಂದು ಅವರು ತಿಳಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಇತಿಹಾಸ, ಸಂಸ್ಕೃತಿ ಹಾಗೂ ಸಮಾಜದ ಮಹನೀಯರಿಗೆ ಗೌರವ ಸಲ್ಲಿಸುವ ಕಾರ್ಯಗಳಿಗೂ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಆದ್ಯತೆ ನೀಡುತ್ತಿದ್ದಾರೆ. ವಿವಿಧ ಸಮಾಜಗಳ ಮಹಾಪುರುಷರ ಪ್ರತಿಮೆಗಳನ್ನು ನಿರ್ಮಿಸುವ ಮೂಲಕ ಸಮಾಜದಲ್ಲಿ ಸಾಮರಸ್ಯ, ಪರಸ್ಪರ ಗೌರವ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಲಪಡಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ವಿವಿಧ ಸಮುದಾಯಗಳ ಮುಖಂಡರು, ಗ್ರಾಮಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಲಕ್ಷ್ಮೀತಾಯಿ ಫೌಂಡೇಶನ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡು ಈ ಪ್ರತಿಮೆ ಸಾರ್ವಜನಿಕರಿಗೆ ಸ್ಫೂರ್ತಿಯ ಕೇಂದ್ರವಾಗಲಿ ಎಂದು ಆಶಿಸಿದರು.

Related Articles

Back to top button