Karnataka NewsLatestPolitics

*ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ: ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

Home add -Advt


ಮಹಾತ್ಮಾಗಾಂಧೀ ಅವರು ಭಾರತದ ಆತ್ಮ ಹಳ್ಳಿಗಳಲ್ಲಿದೆ ಎಂದು ಹೇಳಿದ್ದಾರೆ. ಗ್ರಾಮಗಳ ಅಭಿವೃದ್ಧಿಗಾಗಿ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧೀ ಅವರು ಸಾಂವಿಧಾನಿಕ ತಿದ್ದುಪಡಿ ತಂದಿದ್ದರು. ಆ ಮಹತ್ವದ ಚಿಂತನೆಯ ಸಾಕಾರ ತಮ್ಮ ಗುರಿಯಾಗಿದೆ ಎಂದರು.
ಗ್ರಾಮೀಣ ಭಾಗದ ಸ್ವಚ್ಛತೆ ಕಾಪಾಡಲು ಮತ್ತು ಹಳ್ಳಿಗಳಲ್ಲಿ ಗುಣಮಟ್ಟದ ಆಸ್ತಿಗಳ ಸೃಜನೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸಲಾಗುವುದು. ನಾಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಚಯಾತ್ಮಕ ಸಭೆ ನಡೆಸುತ್ತಿದ್ದು, ಮುಂದಿನ ಯೋಜನೆ ರೂಪಿಸಲಾಗುವುದು ಎಂದರು.


ಗ್ರಾಮೀಣ ಭಾಗದಲ್ಲಿರುವ ಕೆರೆಗಳು ಮತ್ತು ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮತ್ತು ಗ್ರಾಮೀಣ ಮೂಲಸೌಕರ್ಯ ವರ್ಧನೆಗೆ ಕ್ರಮ ವಹಿಸುವುದಾಗಿ ನೂತನ ಸಚಿವ ಈಶ್ವರ ಖಂಡ್ರೆ ತಿಳಿಸಿದರು.


ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ಯೋಜನೆಗಳನ್ನು ಕಲ್ಪನೆಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.

Related Articles

Back to top button