Kannada NewsLatestNational

*ರಾಜಧಾನಿಯಲ್ಲಿ ಭೀಕರ ಅಗ್ನಿ ಅವಘಡ; ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮುಂಜಾನೆ ಶಹದಾರ ಜಿಲ್ಲೆಯ ವಿಶ್ವಾಸ್ ನಗರ ಪ್ರದೇಶದ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ.

ಯೂನಿಟಿ ಮಾಲ್ ಸಮೀಪದ ಗಲ್ಲಿ ನಂಬರ್ 11ರಲ್ಲಿರುವ ಮನೆಯ ಪಾರ್ಕಿಂಗ್ ಪ್ರದೇಶದಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ನೆಲಮಹಡಿಯಲ್ಲಿ ಇ-ರಿಕ್ಷಾ ಚಾರ್ಜಿಂಗ್ ಕೇಂದ್ರವಿದ್ದು, ಅಲ್ಲಿನ ಚಾರ್ಜಿಂಗ್ ಪಾಯಿಂಟ್‌ನಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ.

ಬೆಳಿಗ್ಗೆ 4:13ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಲಭಿಸಿದ್ದು, ಕೂಡಲೇ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಈ ವೇಳೆ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿ ಹಾಗೂ ದಟ್ಟ ಹೊಗೆಯಿಂದಾಗಿ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡ ಅವರನ್ನು ಹೊರತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇ-ರಿಕ್ಷಾ ಚಾರ್ಜಿಂಗ್ ಕೇಂದ್ರದಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆಯ ಮೇರೆಗೆ ತನಿಖೆ ಮುಂದುವರಿದಿದೆ ಎಂದು ಶಹದಾರ ಜಿಲ್ಲೆಯ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ.

ಚಾರ್ಜಿಂಗ್ ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿ ನಾಲ್ವರ ಜೀವ ಬಲಿ ಪಡೆದಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Related Articles

Back to top button