*ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಯಶಸ್ವಿಗೊಳಿಸಿ: ಡಿಸಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವನ್ನು ಕಾಲಮಿತಿಯೊಳಗೆ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಜರುಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ(ಸೆ.2) ಜರುಗಿದ ರಾಜ್ಯ ಹಿಂದುಳಿದ ಆಯೋಗದ ವತಿಯಿಂದ ಕೈಗೊಳ್ಳಲಾಗುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಸ್ಕಾಂ ಹಾಗೂ ಹುಕ್ಕೇರಿ ವಿದ್ಯುತ್ ಸರಬರಾಜು ಸಹಕಾರ ಸಂಘದ ವತಿಯಿಂದ ಮೀಟರ್ ರೀಡರ್ ಗಳ ಮೂಲಕ ಮನೆಗಳನ್ನು ಗುರುತಿಸಿ ಎಲ್ಲ ಮನೆಗಳಿಗೆ ಸ್ಪೀಕ್ಕರ್ ಅಂಟಿಸುವ ಕಾರ್ಯವನ್ನು ತ್ವರಿತವಾಗಿ ಜರುಗಿಸಬೇಕು.
ವಿದ್ಯುತ್ ಸಂಪರ್ಕ ಇರದೆ ಇರುವಂತಹ ಗ್ರಾಮ, ಪ್ರದೇಶಗಳನ್ನು ಗುರುತಿಸುವದು ಮುಖ್ಯ ಕಾರ್ಯವಾಗಿದೆ. ಈ ಕಾರ್ಯದಲ್ಲಿ ಗ್ರಾಮ ಲೆಕ್ಕಿಗರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹೆಸ್ಕಾಂ ಸಿಬ್ಬಂದಿಗಳೊಂದಿಗೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವದರ ಮೂಲಕ ಎಲ್ಲ ಮನೆಗಳನ್ನು ಗುರುತಿಸುವ ಕಾರ್ಯವಾಗಬೇಕು. ಈ ಕಾರ್ಯವನ್ನು ಹತ್ತು ದಿನಗಳಲ್ಲಿ ಪೂರ್ಣಗೊಳಿಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಪ್ರದೇಶದಲ್ಲಿ ಯಾವುದೇ ಕುಟುಂಬಗಳು ಸಮಿಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು. ನೆಟ್ ವರ್ಕ ಇಲ್ಲದೇ ಇರುವ ಪ್ರದೇಶದಲ್ಲಿ ವಿಶೇಷ ಅಭಿಯಾನದ ಮೂಲಕ ಮನೆಗಳನ್ನು ಗುರುತಿಸುವ ಕಾರ್ಯವಾಗಬೇಕು. ತದನಂತರ ತಹಶೀಲ್ದಾರ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಮತ್ತೊಮ್ಮೆ ಪರಿಶೀಲನೆ ಜರುಗಿಸಿ ವರದಿ ಸಲ್ಲಿಸಬೇಕು ಎಂದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂದಿಗಳನ್ನು ನಿಯೋಜಿಸಿ ಅವರಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲು ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಯಾರೊಬ್ಬರು ಸಮೀಕ್ಷಾ ಕಾರ್ಯದಿಂದ ಹೊರಗುಳಿಯದಂತೆ ಹಾಗೂ ಲೋಪಗಳಿಗೆ ಆಸ್ಪದ ನೀಡದಂತೆ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಿವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಮಾತನಾಡಿ, ಹೆಸ್ಕಾಂ ಮೀಟರ ಇಲ್ಲದೆ ಇರುವಂತಹ ಹಾಗೂ ತೋಟದ ಮನೆಗಳನ್ನು ಗುರುತಿಸಿ ಅಂತಹ ಮನೆಗಳ ಸಮೀಕ್ಷೆ ಜರುಗಿಸಬೇಕು. ಗ್ರಾಮಲೆಕ್ಕಿಗರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮಿಟರ್ ರೀಡರಗಳು ಸಮನ್ವಯ ಸಾಧಿಸಿ ಮನೆಗಳನ್ನು ಗುರುತಿಸಿ ಸ್ವೀಕರ ಅಂಟಿಸಿರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕು. ಸಮಿಕ್ಷಾ ಕಾರ್ಯದ ವರದಿಯನ್ನು ನಿಗದಿತ ತಂತ್ರಾಂಶದಲ್ಲಿ ನಿಯಮಿತವಾಗಿ ದಾಖಲಿಸಬೇಕು. ವಲಸೆ ಹೋದಂತಹ ಕುಟುಂಬಗಳ ಸಮೀಕ್ಷೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆಯಲು ತಿಳಿಸಿದರು.
ಸಭೆಯಲ್ಲಿ ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ಅಭಿನವ ಜೈನ್, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ತಹಶೀಲ್ದಾರ ಬಸವರಾಜ ನಾಗರಾಳ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ, ಹೆಸ್ಕಾಂ ಕಾರ್ಯಪಾಲಕ ಅಭಿಯಂತರ ಚಿಕ್ಕಾಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.