
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಬೆನ್ನಲ್ಲೇ ಶಂಕಿತ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಭಾಗಗಳಲ್ಲಿ ಹೈಲರ್ಟ್ ಘೋಷಿಸಲಾಗಿದ್ದು, ಎಲ್ಲೆಡೆ ಪೊಲೀಸರು ಕಚ್ಚೆಚ್ಚರ ವಹಿಸಿದ್ದಾರೆ.
ಬಾಂಬ್ ಪತ್ತೆಯಾದ ಮಂಗಳೂರು ಏರ್ ಪೋರ್ಟ್ ನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಪ್ರತಿ ಪ್ರಯಾಣಿಕರನ್ನು ಹಾಗೂ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಬಾಂಬ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಅಗಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣ, ಪ್ರಮುಖ ಅಣೆಕಟ್ಟು, ಪ್ರಸಿದ್ಧ ಪ್ರವಾಸಿ ತಾಣಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಸಂಬಂಧ ತೀವ್ರ ನಿಗಾವಹಿಸುವಂತೆ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಕಮಿಷನರೇಟ್’ಗಳಿಗೆ ಸೂಚನೆ ನೀಡಲಾಗಿದೆ.
ಇನ್ನು ಮಂಗಳೂರಿನಲ್ಲಿ ಬಾಂಬ್ ಪತ್ತೆಯಾಗುತ್ತಿದ್ದಂತೆಯೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ಶ್ವಾನದಳದ ಮೂಲಕ ತಪಾಸಣೆ ನಡೆಸಲಾಗಿದೆ. ಅಲ್ಲದೇ ನಿಲ್ದಾಣದ ಪ್ರವೇಶ ಸ್ಥಳದಲ್ಲೇ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಜನನಿಬಿಡ ಪ್ರವಾಸಿ ತಾಣ ಸೇರಿದಂತೆ ಇತರ ಪ್ರದೇಶಗಳಲ್ಲಿ ಹೆಚ್ಚು ಭದ್ರತೆ ಕಲ್ಪಿಸಲಾಅಗಿದೆ.
ಮಂಗಳೂರಿಗೆ ಎನ್ಐಎ ತಂಡ:
ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಇಂದು (ಎನ್ಐಎ) ರಾಷ್ಟ್ರೀಯ ತನಿಖಾ ದಳದ ನಾಲ್ವರ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಲಿದೆ. ವಿಮಾನ ನಿಲ್ದಾಣ, ಕೆಂಜಾರು ಮೈದಾನ ಇಟ್ಟ ಸ್ಥಳವನ್ನು ಎನ್ಐಎ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ