Kannada NewsLatest

*ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ಸಿಎಂ ಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ: ಮಂಗಳೂರು ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿರುವ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್​​ ರೈ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ಗೆ ಪತ್ರ ಬರೆದಿದ್ದಾರೆ.

ಕೆ.ಆರ್.ಐ.ಡಿ.ಎಲ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಮತ್ತು ಕಿರಿಯ ಇಂಜಿನಿಯರ್ ಪ್ರಜ್ವಲ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಆರೋಪಗಳಿವೆ. ಹೀಗಾಗಿ ಈ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅಧಿಕಾರಿಗಳನ್ನು ಅಮಾನತುಗೊಳಿಸಿ ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

Home add -Advt

ಈ ಇಬ್ಬರು ಅಧಿಕಾರಿಗಳು ಕರ್ತವ್ಯ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಮಾಡಿದ್ದಾರೆ. ಇವರ ವಿರುದ್ಧ ದೂರುಗಳು ಕೇಳಿಬಂದಿವೆ.
ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖೆಯ ಸಚಿವರಿಗೆ ಮಾಸಿಕವಾಗಿ ಹಣ ಸಂದಾಯ ಮಾಡಬೇಕಾಗುತ್ತದೆ ಎಂದು ಹೇಳಿ, ಕೆ.ಆರ್.ಐ.ಡಿ.ಎಲ್. ಚಾರ್ಜ್ ಹೆಸರಿನಲ್ಲಿ ಶೇ.7ರಷ್ಟು ವರೆಗೆ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿರುವ ಬಗ್ಗೆ ಗಂಭೀರ ಆರೋಪಗಳು ಹಾಗೂ ದೂರುಗಳು ಬಂದಿವೆ ಎಂದು ಶಾಸಕ ಅಶೋಕ್ ರೈ ಪತ್ರದಲ್ಲಿ ದೂರಿದ್ದಾರೆ.

ಅಧಿಕಾರಿಗಳ ವಿರುದ್ಧ ಈಗಾಗಲೇ ಬಂದಿರುವ ದೂರುಗಳು ಮತ್ತು ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Related Articles

Back to top button