
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿ, ಮಾಸಿಕ ₹15 ಸಾವಿರ ಗೌರವಧನ ನಿಗದಿ ಮಾಡಬೇಕು ಹಾಗೂ ಹಲವು ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ನಗರದ ಸರ್ದಾರ್ ಮೈದಾನದಿಂದ ಆರಂಭವಾದ ಪ್ರತಿಭಟನಾ ಪಾದಯಾತ್ರೆ ಚೆನ್ನಮ್ಮ ವೃತ್ತದ ಮೂಲಕ ಸಾಗಿ ಜಿಲ್ಲಾ ಪಂಚಾಯತ್ ಆವರಣ ತಲುಪಿತು. ನೂರಾರು ಆಶಾ ಕಾರ್ಯಕರ್ತೆಯರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರಸ್ತುತ ನೀಡಲಾಗುತ್ತಿರುವ ಗೌರವಧನದಿಂದ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಜೊತೆಗೆ, ಹಲವು ತಿಂಗಳಿಂದ ಪಾವತಿಯಾಗದೆ ಉಳಿದಿರುವ ಪ್ರೋತ್ಸಾಹಧನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇನ್ನು, ‘ಸಮಸ್ತ ಆ್ಯಪ್’ ಮೂಲಕ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆ ಹಾಗೂ ಹೆಚ್ಚುತ್ತಿರುವ ಕೆಲಸದ ಒತ್ತಡವನ್ನು ಕಡಿಮೆ ಮಾಡಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.
ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



