ಪ್ರಗತಿವಾಹಿನಿ ಸುದ್ದಿ, ಗೋಕಾಕ: ಗೋಕಾಕ ನಗರದ ಸರ್ವಾಂಗೀಣ ವಿಕಾಸವೇ ನಮ್ಮ ಪ್ರಮುಖ ಧ್ಯೇಯವಾಗಿದೆ. ಜನತೆಗೆ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಎಲ್ಲ ೩೧ ವಾರ್ಡುಗಳನ್ನು ಅಭಿವೃದ್ಧಿ ಪಡಿಸುವ ಜವಾಬ್ದಾರಿ ನಮ್ಮದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಸೋಮವಾರದಂದು ನಗರದ ವಿವಿಧೆಡೆ ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಪರ ಪ್ರಚಾರಾರ್ಥವಾಗಿ ಮಾತನಾಡಿದ ಅವರು, ಈ ಉಪಚುನಾವಣೆಯಲ್ಲಿ ಕೆಲವರು ರಾಜಕೀಯ ದುರದ್ದೇಶದಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು ಅಂತಹ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದೆಂದು ಅವರು ವಿನಂತಿಸಿಕೊಂಡರು.
ಈಗಾಗಲೇ ನಗರವನ್ನು ಸೌಂದರ್ಯಕರಣ ಮಾಡುವ ಬಗ್ಗೆ ಅನೇಕರಿಂದ ಸಲಹೆ ಸೂಚನೆಗಳನ್ನು ಪಡೆಯಲಾಗಿದೆ. ಮೂಲಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಆರು ತಿಂಗಳ ಒಳಗಾಗಿ ಗೋಕಾಕ ನಗರದಲ್ಲಿರುವ ಪ್ರತಿ ವಾರ್ಡುಗಳ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುಧಾರಣೆಗೆ ಅಗತ್ಯವಿರುವ ಅನುದಾನವನ್ನು ತಂದು ಅಭಿವೃದ್ಧಿ ಪಡಿಸಲಾಗುವುದೆಂದು ಅವರು ಹೇಳಿದರು.
ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮದೇ ಬಿಜೆಪಿ ಸರ್ಕಾರ ಇರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೆರವು ಸಿಗಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ರಮೇಶ್ ಜಾರಕಿಹೊಳಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಪರ ಕಾರ್ಯಗಳನ್ನು ಕೈಗೊಂಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಜನಪರ ಕಾರ್ಯಗಳು ಜೊತೆಗೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಗಮನಿಸಿ ಡಿ.೫ರಂದು ಜರುಗುವ ಉಪಚುನಾವಣೆಯಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಮುನ್ನಡೆ ನೀಡಿ ರಮೇಶ್ ಜಾರಕಿಹೊಳಿ ಅವರನ್ನು ಜಯಶಾಲಿಯನ್ನಾಗಿ ಮಾಡುವಂತೆ ಕೋರಿಕೊಂಡ ಅವರು, ನೀವು ಹಾಕುವ ಮತ ಕೇವಲ ಅಭ್ಯರ್ಥಿಗಲ್ಲ. ಅದು ನೇರವಾಗಿ ಬಿಜೆಪಿ ಸರ್ಕಾರವನ್ನು ಸ್ಥಿರಗೊಳಿಸಲು ಹಾಕಿದಂತಾಗುತ್ತದೆ.
ಯಡಿಯೂರಪ್ಪನವರ ಸರ್ಕಾರವನ್ನು ಬಲಪಡಿಸಿದಂತಾಗುತ್ತದೆ. ಗೋಕಾಕ ಮತಕ್ಷೇತ್ರದ ಸರ್ವತೋಮುಖ ಏಳ್ಗೆ ಮತ್ತು ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗಾಗಿ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಯಡಿಯೂರಪ್ಪನವರು ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ, ಬೆಳಗಾವಿ ವಿಭಾಗೀಯ ಪ್ರಭಾರಿ ಈರಪ್ಪ ಕಡಾಡಿ, ಮಾಜಿ ನಗರಾಧ್ಯಕ್ಷ ಸಿದ್ಲಿಂಗ ದಳವಾಯಿ, ಎಸ್.ಎ.ಕೋತವಾಲ್, ಪ್ರಭಾ ಶುಗರ್ ಅಧ್ಯಕ್ಷ ಅಶೋಕ ಪಾಟೀಲ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಗಣ್ಯ ವರ್ತಕರಾದ ವೀರಣ್ಣಾ ಬಿದರಿ, ವಿಕ್ರಮ ಅಂಗಡಿ, ಮಹಾಂತೇಶ ತಾಂವಶಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಶಶಿಧರ ದೇಮಶೆಟ್ಟಿ, ಜ್ಯೋತಿಭಾ ಸುಬಂಜಿ,ಪರುಶರಾಮ ಭಗತ, ಎಪಿಎಂಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ಪ್ರಕಾಶ ರಾಠೋಡ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ವರ್ತಕರು, ಆಯಾ ವಾರ್ಡುಗಳ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ