*ಸಚಿವ ಸತೀಶ್ ಜಾರಕಿಹೊಳಿ ಖರ್ಗೆ ಭೇಟಿ ವಿಚಾರ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ತಂದೆ, ಸಚಿವರಾದ ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಅಧ್ಯಕ್ಷರು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು ಹೊಸದೆನಲ್ಲ. ದೆಹಲಿಗೆ ಹೋದಾಗ ವರಿಷ್ಠರನ್ನು ಭೇಟಿಯಾಗುವುದು ಸಹಜ. ಹೀಗಾಗಿ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರಷ್ಟೇ ಎಂದು ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.
ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಭಾನುವಾರ ಜಿಲ್ಲಾ ವಾಲ್ಮೀಕಿ ಸಮಾಜ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ, ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗಬೇಕೆಂದು ಅಭಿಯಾನ ನಡೆಯುತ್ತಿರುವ ಬಗ್ಗೆ ಮಾತನಾಡಿ, ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗಬೇಕೆಂದು ಇಂದು, ನಿನ್ನೆ ಅಭಿಯಾನ ನಡೆಯುತ್ತಿಲ್ಲ. ಕಳೆದ ಆರೇಳು ವರ್ಷಗಳಿಂದ ಈ ಅಭಿಯಾನ ನಡೆಯುತ್ತಿದೆ. ಸಿಎಂ ಆಗಲು ಸಮಯ ಕೂಡಿ ಬರಬೇಕು. ಆದರೆ ತಂದೆಯವರು ಈಗಲೇ ಸಿಎಂ ಆಗುತ್ತೇನೆಂದು ಎಲ್ಲಿಯೂ ಹೇಳಿಲ್ಲ ಎಂದರು.
ಎಸ್ಟಿ ಸಮುದಾಯಕ್ಕೆ ಸೇರಿಸಬೇಕೆಂದು ಹಲವು ಸಮುದಾಯದವರು ಹೋರಾಟ ಮಾಡುತ್ತಿದ್ದು, ನಮಗೂ ಕೂಡ ಮನವಿ ಸಲ್ಲಿಸಿದ್ದಾರೆ. ಈ ಕುರಿತು ನಾನು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ