
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದು ಗಂಡಸರು ತಮ್ಮ ಹೆಂಡತಿಯರನ್ನು ಮಾರಿಕೊಳ್ಳುವ ಸ್ಥಿತಿಗೆ ಬಂದಿದ್ದು ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಟಾಂಗ್ ನೀಡಿರುವ ಬೆಲ್ಲದ್, ಬರೀ ಸಭೆ ಮಾಡಿದರೆ ಸಾಲದು. ಸರ್ಕಾರ ತನ್ನ ಭ್ರಷ್ಟಾಚಾರವನ್ನು ನಿಲ್ಲಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಅದನ್ನು ಸರಿ ಮಾಡಬೇಕು. ಇದಕ್ಕೆಲ್ಲಾ ಸರ್ಕಾರದ ಭ್ರಷ್ಟಾಚಾರವೇ ನೇರ ಕಾರಣ ಎಂದು ವಾಗ್ದಾಳಿ ನಡೆಸಿದರು.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆಗಳು ನಡೆಯುತ್ತಿವೆ, ಜನ ಊರು ಬಿಡುತ್ತಿದ್ದಾರೆ. ಫೈನಾನ್ಸ್ ಅವರ ಕಾಟಕ್ಕೆ ಹೆಂಡತಿಯರನ್ನು ಮಾರುವ ಸ್ಥಿತಿಯನ್ನೇ ಈ ಸರ್ಕಾರವೇ ತಂದಿದೆ. ಅತ್ತ ಪೊಲೀಸ್ ಠಾಣೆಗಳಲ್ಲೂ ಯಾರಿಗೂ ರಕ್ಷೆ ಸಿಗುತ್ತಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಈ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರದಲ್ಲಿನ ಭ್ರಷ್ಟಾಚಾರ ಕಾರಣ. ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದು ಕುಟುಕಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ