ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2021ರ ಹಿನ್ನೆಲೆಯಲ್ಲಿ ಶುಕ್ರವಾರ (ಸೆ.3) ನಗರದ 58 ವಾರ್ಡುಗಳಲ್ಲಿ ಮತದಾನ ನಡೆಯಲಿದೆ.
ಮತದಾನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಗುರುವಾರ (ಸೆ.2) ನಗರದ ಕೆಲವೆಡೆ ಸಂಚರಿಸಿ ಮತಗಟ್ಟೆಗಳನ್ನು ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಮಸ್ಟರಿಂಗ್ ಕೇಂದ್ರವಾಗಿರುವ ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್ ನಿಂದ ಇಂದು ಬೆಳಿಗ್ಗೆಯಿಂದಲೇ ಚುನಾವಣಾ ಸಿಬ್ಬಂದಿ ಮತಯಂತ್ರ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ತೆಗೆದುಕೊಂಡು ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ತೆರಳಿರುತ್ತಾರೆ.
ಈ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಅಂತಿಮ ಕ್ಷಣದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪರಿಶೀಲಿಸಿದರು.
ಮತಗಟ್ಟೆಗಳಲ್ಲಿ ಮತಯಂತ್ರಗಳ ವ್ಯವಸ್ಥೆ, ಕೋವಿಡ್ ಮಾರ್ಗಸೂಚಿ ಪಾಲನೆ ಹಾಗೂ ಮತಗಟ್ಟೆಗಳಲ್ಲಿ ಮೂಲಸೌಕರ್ಯಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಮತಗಟ್ಟೆಗೆ ನಿಯೋಜಿತ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ಚರ್ಚೆ ನಡೆಸಿದ ಅವರು, ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
4.31 ಲಕ್ಷ ಮತದಾರರು:
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಒಟ್ಟು 4,31,383 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.
ಇದರಲ್ಲಿ 560 ಸೇವಾ ಮತದಾರರು ಸೇರಿದಂತೆ 2,15,364 ಪುರುಷರು ಹಾಗೂ 2,16,019 ಮಹಿಳಾ ಮತದಾರರಿದ್ದಾರೆ.
58 ವಾರ್ಡುಗಳಲ್ಲಿ ಒಟ್ಟಾರೆ 402 ಮತಗಟ್ಟೆಗಳು ಮತ್ತು 13 ಉಪ ಮತಗಟ್ಟೆಗಳು ಸೇರಿದಂತೆ 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಪ್ರತಿ ಮತಗಟ್ಟೆಗೆ ಐದು ಜನ ಚುನಾವಣಾ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶೇ.20 ಹೆಚ್ಚುವರಿ ಅಧಿಕಾರಿ/ಸಿಬ್ಬಂದಿ ಸೇರಿದಂತೆ ಒಟ್ಟು 2500 ಜನರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ.
ಚುನಾವಣೆಯನ್ನು ನ್ಯಾಯಸಮ್ಮತವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಗರದ ಎಲ್ಲ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ಮನವಿ ಮಾಡಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ