
ಪ್ರಗತಿವಾಹಿನಿ ಸುದ್ದಿ, ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಗೆ ಚಾಲನೆ ನೀಡಲು ಇಂದು ಉಡುಪಿಗೆ ಆಗಮಿಸಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಯುವಜನ ಮತ್ತು ವಿಕಲಚೇತನರ ಸಬಲೀಕರಣ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಅವರು ರಾಜ್ಯದ ಜನತೆಗೆ ಸುಖ, ಸಮೃದ್ಧಿಗಾಗಿ ಪ್ರಾರ್ಥಿಸಿದರು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಶ್ರೀಮಠದಿಂದ ಸ್ವಾಗತಿಸಿ ಸತ್ಕರಿಸಲಾಯಿತು.
ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್,ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್,ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


ನಂತರ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ವಿವಿಧ ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.