

ಪ್ರಗತಿವಾಹಿನಿ ಸುದ್ದಿ, ತೆಲಂಗಾಣ: ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರವೂ ಭರ್ಜರಿ ಪ್ರಚಾರ ಮುಂದುವರಿಸಿದರು.
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ತೆಲಂಗಾಣಕ್ಕೆ ತೆರಳಿ ವಿವಿಧ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡ ಲಕ್ಷ್ಮೀ ಹೆಬ್ಬಾಳಕರ್, ಸೋಮವಾರ ಮಲಕ್ ಪೇಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶೇಖ್ ಅಕ್ಬರ್ ಪರ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು 6 ತಿಂಗಳು ಕಳೆದಿದ್ದು, 6 ತಿಂಗಳಿನಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದರಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಭರವಸೆಯನ್ನು ನಿಗದಿತ ಸಮಯದಲ್ಲಿಯೇ ಈಡೇರಿಸಲಾದೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಈ ಕ್ಷೇತ್ರದ ಅಭ್ಯರ್ಥಿ ಹಾಗೂ ತೆಲಂಗಾಣದಲ್ಲಿ ಅತ್ಯಧಿಕ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೆಬ್ಬಾಳಕರ್ ಮನವಿ ಮಾಡಿದರು.
ಈ ಸಮಯದಲ್ಲಿ ಪಕ್ಷದ ಅಭ್ಯರ್ಥಿಯಾದ ಶೇಖ್ ಅಕ್ಬರ್, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ