ಮತದಾರರಿಗೆ, ಕಾರ್ಯಕರ್ತರಿಗೆ, ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ಕಾಂಗ್ರೆಸ್ ಗೆಲುವಿನ ವಿಶ್ವಾಸ


* ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ :* ಕಳೆದ ಸುಮಾರು 2 ತಿಂಗಳ ಕಾಲ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲ ಮುಖಂಡರಿಗೆ, ಕಾರ್ಯಕರ್ತರಿಗೆ ಮತ್ತು ಮತದಾನ ಮಾಡಿದ ನಾಗರಿಕರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಅವರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಚುನಾವಣೆ ಕೆಲಸದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಸಂಪೂರ್ಣವಾಗಿ ತೊಡಗಿಸಿಕೊಂಡು, ಹಗಲು, ರಾತ್ರಿ ಕೆಲಸ ಮಾಡಿದ್ದಾರೆ. ಇದರಿಂದಾಗಿ ನಮ್ಮ ಪ್ರಚಾರ ಕಾರ್ಯಕರ್ಮಗಳು ಸೇರಿದಂತೆ ಸಂಪೂರ್ಣ ಚುನಾವಣೆ ಪ್ರಕ್ರಿಯೆ ಅತ್ಯಂತ ವ್ಯವಸ್ಥಿತವಾಗಿ ನಡೆಯಲು ಸಾಧ್ಯವಾಗಿದೆ. ಹಾಗಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ಜೊತೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಕಲ್ಪಿಸದ ಅತ್ಯಂತ ಸಾಂತಿಯುತವಾಗಿ ಮತದಾನ ಮಾಡಿದ ಎಲ್ಲ ನಾಗರಿಕರಿಗೆ, ಇಡೀ ಪ್ರಕ್ರಿಯೆಯನ್ನು ಜವಾಬ್ದಾರಿಯಿಂದ, ವ್ಯವಸ್ಥಿತವಾಗಿ ನಿರ್ವಹಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ಹಬ್ಬದ ದಿನವಾದ ಇಂದು ಯಾವುದೇ ಅಹಿತಕರ ಘಟನೆ ನಡೆಯದೆ, ಕ್ಷೇತ್ರದಾದ್ಯಂತ ಸುಗಮವಾಗಿ ಮತದಾನ ನಡೆದಿದ್ದು, ಇದಕ್ಕೆ ಪ್ರಮುಖ ಪಾತ್ರವಹಿಸಿದ ಪೊಲೀಸ್ ಸಿಬ್ಬಂದಿ ವರ್ಗಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಹಗಲಿರುಳು ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಸದಾ ಅಭಾರಿಯಾಗಿರುತ್ತೇನೆ. ನಿಮ್ಮೆಲ್ಲರ ಉತ್ಸಾಹ ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಹೆಚ್ಚು ಕೆಲಸ ಮಾಡಲು ಸ್ಫೂರ್ತಿ ತುಂಬಿದೆ ಎಂದು ಸಚಿವರು ತಿಳಿಸಿದ್ದಾರೆ.
*ಕಾಂಗ್ರೆಸ್ ಗೆಲುವು ನಿಶ್ಚಿತ*
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಗೆಲುವು ಗ್ಯಾರಂಟಿ. ಕಳೆದ ಒಂದೂವರೆ ತಿಂಗಳ ಕಾರ್ಯಕರ್ತರ ಶ್ರಮಕ್ಕೆ ಬೆಲೆ ಸಿಗಲಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಹಗಲಿರುಳು ಶ್ರಮ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಎಲ್ಲಾ ವರ್ಗದ, ಎಲ್ಲಾ ಸಮುದಾಯದವರನ್ನು ನಾವು ತಲುಪಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಗೆಲುವು ದಾಖಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯ ವಿಜಯನಗರದ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಬೆಳಗ್ಗೆ 8 ಗಂಟೆ ವೇಳೆಗೆ ಆಗಮಿಸಿ ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಬಳಿಕ ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ, ಬೈಲಹೊಂಗಲ ಕ್ಷೇತ್ರಗಳ ವ್ಯಾಪ್ತಿಯ ಕೆಲ ಮತಗಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಅಲ್ಲದೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ