Kannada NewsKarnataka NewsLatestPolitics

*ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಹಲವು ಪ್ರಶ್ನೆಗಳು*: *ಸಿಸಿಬಿ ತನಿಖೆ ಬಗ್ಗೆ ಸಚಿವ ನರೇಂದ್ರಸ್ವಾಮಿ ಅನುಮಾನ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಹಲವು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಮೆರಿಕ, ಕೆನಡಾ ಹಾಗೂ ಕಠ್ಮಂಡು ಮೂಲಕ ನಡೆದ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡಬೇಕಿದೆ ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಆಗ್ರಹಿಸಿದ್ದಾರೆ. ಸಿಸಿಬಿ ತನಿಖೆಯಲ್ಲಿನ ಕೆಲವು ಅಂಶಗಳನ್ನು ಪ್ರಸ್ತಾಪಿಸಿರುವ ಸಚಿವರು, ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನರೇಂದ್ರಸ್ವಾಮಿ, ವಿಡಿಯೋಗಳನ್ನು ಕೆನಡಾದಲ್ಲಿ ಅಪ್‌ಲೋಡ್ ಮಾಡಿದವರು ಯಾರು? ಅವರನ್ನು ಕಠ್ಮಂಡು ಮೂಲಕ ಭಾರತಕ್ಕೆ ಕರೆತಂದವರು ಯಾರು? ತನಿಖೆ ಆರಂಭವಾದಾಗ ಸಿಸಿಬಿ ನೋಟಿಸ್ ನೀಡಿದ್ದ ಮೂವರು ವಿಚಾರಣೆಗೆ ಯಾಕೆ ಹಾಜರಾಗುತ್ತಿಲ್ಲ? ಅವರು ಯಾವ ಪಕ್ಷದವರು ಮತ್ತು ಯಾರ ಬೆಂಬಲಿಗರು ಎಂಬುದನ್ನು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ತನಿಖೆ ದೆಹಲಿಗೂ ತಲುಪಿರುವ ಬಗ್ಗೆ ಪ್ರಶ್ನೆ ಎತ್ತಿದ ಸಚಿವರು, ಯಾರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂಬುದನ್ನು ತನಿಖೆಯೇ ಬಹಿರಂಗಪಡಿಸಲಿ ಎಂದಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಿ ಕಾಂಗ್ರೆಸ್ ಪಕ್ಷವನ್ನು ಒಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ರಾಜ್ಯಕ್ಕೆ ನೀಡಿರುವ ಕೊಡುಗೆ, ಅನುದಾನ ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಲಿ. ವೈಯಕ್ತಿಕ ಆರೋಪ ಹಾಗೂ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

ರಾಜ್ಯದ ಯುವಜನತೆಗೆ ನಾಯಕರು ಯಾವ ಸಂದೇಶ ನೀಡುತ್ತಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಾರ್ವಜನಿಕ ಜೀವನದಲ್ಲಿರುವವರು ತಮ್ಮ ಸ್ಥಾನಮಾನದ ಘನತೆ ಮತ್ತು ಗೌರವ ಕಾಪಾಡಿಕೊಳ್ಳಬೇಕು. ಜನರ ಮತದಿಂದ ಅಧಿಕಾರಕ್ಕೆ ಬಂದವರು ಅಧಿಕಾರ ದುರುಪಯೋಗಪಡಿಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

ಕನ್ನಡ ಬಾವುಟ ನಮ್ಮ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಅದಕ್ಕೆ ಅಧಿಕೃತ ಮಾನ್ಯತೆ ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು. ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಒಮ್ಮತದ ನಿರ್ಣಯ ಅಂಗೀಕರಿಸಿ, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಚಿಂತನೆ ಇದೆ. ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಈ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿದೆಯೇ ಎಂಬುದು ನಮ್ಮ ಪ್ರಶ್ನೆ. ಈ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಹೀಗಾಗಿ ದಾಖಲೆಗಳ ಸಮೇತ ರಾಷ್ಟ್ರವ್ಯಾಪಿ ಹೋರಾಟ ನಡೆಸುತ್ತೇವೆ ಎಂದು ಸಚಿವರು ಎಚ್ಚರಿಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ದಾಖಲೆಗಳನ್ನು ಮುಂದಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಮೂರುರಿಂದ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಬಗ್ಗೆ ಬಿ.ಆರ್. ಪಾಟೀಲ್ ಕೂಡ ಹೇಳಿಕೆ ನೀಡಿದ್ದಾರೆ.

ಒಬ್ಬೊಬ್ಬರು ತಮ್ಮ ಕ್ಷೇತ್ರಗಳ ಅನುಭವದ ಆಧಾರದ ಮೇಲೆ ಮಾತನಾಡಿರಬಹುದು. ಆದರೆ ರಾಜ್ಯವ್ಯಾಪಿ ವಿಚಾರವನ್ನು ಅವರು ಪ್ರಸ್ತಾಪಿಸಿರಲು ಸಾಧ್ಯವಿಲ್ಲ. ನಾವು ಸುಮ್ಮನೆ ಆರೋಪ ಮಾಡುತ್ತಿಲ್ಲ. ದಾಖಲೆಗಳ ಸಮೇತ ಹೋರಾಟ ನಡೆಸುತ್ತಿದ್ದೇವೆ ಎಂದು ನರೇಂದ್ರಸ್ವಾಮಿ ಸ್ಪಷ್ಟಪಡಿಸಿದ್ದಾರೆ.


Related Articles

Back to top button