
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಗಳಲ್ಲಿ ನಾಗೇಂದ್ರ ಅವರ ತಪ್ಪಿಲ್ಲವೆಂದು ಸಾಬೀತಾದರೆ ಸಂಪುಟಕ್ಕೆ ಮರಳಿ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ವಾಪಸ್ ಸೇರ್ಪಡೆ ಮಾಡುವ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕ ನಂತರ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಸಚಿವ ಸಂಪುಟ ಪುನಾರಚನೆ ಬಗ್ಗೆ ನನಗೆ ತಿಳಿದಿಲ್ಲ, ಈ ಬಗ್ಗೆ ಸಿಎಂ ಹಾಗೂ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ವಿಳಂಬ ಆಗಿರುವ ವಿಚಾರವಾಗಿ ಮಾತನಾಡಿ, ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ. ಯಾವಾಗ ತೀರ್ಮಾನ ಮಾಡಬೇಕು ಎಂಬ ಬಗ್ಗೆ ಗೃಹ ಇಲಾಖೆ ಕಾರ್ಯದರ್ಶಿಗಳು ತೀರ್ಮಾನ ಕೈಗೊಳ್ಳುತ್ತಾರೆ. ನಾನೂ ಕೂಡಾ ಅವರಿಗೆ ಮೇಲ್ಮನವಿಗೆ ಹೋಗುವುದಾದರೆ ಹೋಗಿ ಅಂತ ಹೇಳಿದ್ದೇನೆ ಎಂದು ತಿಳಿಸಿದರು
ಪ್ರಕ್ರಿಯೆಗಳನ್ನು ಅನುಸರಿಸಿಯೇ ಇಂತಹ ಕೇಸ್ ಗಳಲ್ಲಿ ಮುಂದುವರಿಬೇಕು. ಕಾನೂನು ಇಲಾಖೆಯಿಂದ ಮಾಹಿತಿ ತೆಗೆದುಕೊಳ್ಳಬೇಕು ಹಾಗೂ ಗೃಹ ಇಲಾಖೆ ತೀರ್ಮಾನ ಕೈಗೊಳ್ಳಬೇಕಾಗಿದೆ. ಅಷ್ಟೇ ಅಲ್ಲದೆ, ಪೊಲೀಸ್ ಇಲಾಖೆಯಿಂದ ಪ್ರಸ್ತಾವನೆ ಬರಬೇಕು. ಇದೆಲ್ಲ ಆದ ನಂತರವೇ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ