*ನಾಳೆ ರೈತ ಸಂಘಟನೆಗಳ ಸಭೆ ಕರೆದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಎದುರು ರೈತರು ನಡೆಸಿದ ಪ್ರತಿಭಟನೆಗೆ ತಾತ್ಕಾಲಿಕ ತೆರೆ ಬಿದ್ದಿದೆ. ನಾಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ರೈತ ಸಂಘಟನೆಗಳ ಮುಖಂಡರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಕಬ್ಬು ಕಟಾವಿಗೆ ಸಿದ್ಧವಾಗಿದ್ದರೂ ಸೂಕ್ತ ಬೆಲೆ ನಿಗದಿಯಾಗದ ಕಾರಣ ಹೊಲಗಳಲ್ಲೇ ಒಣಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬೆಲೆ ಘೋಷಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ರೈತರು ಸಚಿವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಿದ ಸತೀಶ್ ಜಾರಕಿಹೊಳಿ, ಈ ಹಿಂದೆ ಮುಖ್ಯಮಂತ್ರಿ ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಬ್ಬಿನ ಬೆಲೆ ನಿಗದಿ ಕುರಿತು ಚರ್ಚೆ ನಡೆಸಲಾಗಿತ್ತು. ಈ ಸಂಬಂಧ ಪ್ರಸ್ತಾವನೆಯನ್ನೂ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.
ಆದರೆ, ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ದರ ನಿಗದಿಪಡಿಸುವ ಪ್ರಸ್ತಾವನೆಗೆ ರೈತ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದರು. ರೈತರ ಹಿತದೃಷ್ಟಿಯಿಂದ ಕನಿಷ್ಠ 5,500 ರೂಪಾಯಿ ದರ ನಿಗದಿಪಡಿಸಿ ಬಿಲ್ ನೀಡಬೇಕು ಎಂದು ಪಟ್ಟು ಹಿಡಿದರು.
ರೈತ ಸಂಘಟನೆಗಳ ನಡುವೆ ವಿವಿಧ ಅಭಿಪ್ರಾಯಗಳಿರುವುದರಿಂದ ಎಲ್ಲರೂ ಒಗ್ಗಟ್ಟಿನಿಂದ ಚರ್ಚೆಗೆ ಬರಬೇಕು ಎಂದು ಸಚಿವರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ರೈತ ಸಂಘಟನೆಗಳ ಮುಖಂಡರ ಸಭೆ ಕರೆಯಲಾಗುವುದು. ಸಭೆಯಲ್ಲಿ ಬೇಡಿಕೆಗಳನ್ನು ಆಲಿಸಿ, ಕಬ್ಬಿನ ಬೆಲೆ ನಿಗದಿ ಕುರಿತು ಮತ್ತೊಮ್ಮೆ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಸಚಿವರ ಭರವಸೆಯ ಬಳಿಕ ರೈತರು ಸದ್ಯಕ್ಕೆ ಪ್ರತಿಭಟನೆಯನ್ನು ಹಿಂಪಡೆದಿದ್ದು, ನಾಳಿನ ಸಭೆಯತ್ತ ಕಬ್ಬು ಬೆಳೆಗಾರರ ಚಿತ್ತ ನೆಟ್ಟಿದೆ.




