*ಮಕ್ಕಳ ಆರೋಗ್ಯ ವಿಚಾರಿಸಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ಹೋಟ್ಟೆನೋವು, ವಾಂತಿಯಿಂದ ಅಸ್ವಸ್ತರಾಗಿ ಜಿಲ್ಲಾಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 16 ಮಕ್ಕಳನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಭೇಟಿಯಾಗಿ ಅರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಲು ದಿಢೀರನೆ ಭೇಟಿ ನೀಡಿದ ಸಚಿವರು ವೈದ್ಯರಿಂದ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಮಕ್ಕಳು ಸಂಪೂರ್ಣ ಗುಣಮುಖರಾಗುವರೆಗೆ ಚಿಕಿತ್ಸೆ ಮುಂದುವರೆಸಬೇಕು ಎಂದು ವೈದ್ಯರಿಗೆ ತಿಳಿಹೇಳಿದರು.
ಮಕ್ಕಳ ಬಳಿ ಊಟದ ಬಗ್ಗೆ ವಿಚಾರಿಸಿದ ಸಚಿವರು: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದುಕೊಂಡು ಸಚಿವರು ಸ್ವತಃ ತಾವೇ ಮಕ್ಕಳ ಬಳಿ ಹೋಗಿ ನಿಂತು ಆಸ್ಪತ್ರೆಯಲ್ಲಿ ನಿತ್ಯ ನೀಡುವ ಊಟದ ಬಗ್ಗೆ ಮಾಹಿತಿ ವಿಚಾರಿಸಿದರು. ಅಲ್ಲದೇ ಅಸ್ವಸ್ಥಗೊಂಡ ಮಕ್ಕಳಿಗೆ ಸೂಕ್ತವಾದ ಚಿಕಿತ್ಸೆ ನೀಡಲು ಬೇಕಾಗುವ ಔಷಧೋಪಚಾರ ನೀಡಬೇಕು. ಆಸ್ಪತ್ರೆಯಲ್ಲಿ ದಾಖಲಾದ ಎಲ್ಲ ಮಕ್ಕಳು ಬೇಗನೆ ಗುಣಮುಖರಾಗಬೇಕು. ಮಕ್ಕಳ ಚಿಕಿತ್ಸೆ ವಿಷಯದಲ್ಲಿ ನಿರ್ಲಕ್ಷೃ ವಹಿಸಿದರೆ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ವೈದ್ಯಾಧಿಕಾರಿಗಳಿಗೆ ಎಚ್ಚರಿಸಿದರು.
ಈ ವೇಳೆ ಬಿಮ್ಸ್ ನಿರ್ದೇಶಕ ಡಾ. ಅಶೋಕ ಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.