
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆಗಾಗಿ ಕಾರೊಂದನ್ನು ನಿಲ್ಲಿಸಿದ್ದ ವೇಳೆ ದುಷ್ಕರ್ಮಿಗಳು ಸಬ್ ಇನ್ಸ್ ಪೆಕ್ಟರ್ ಮೇಲೆಯೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಸಾಲೆತ್ತೂರು ಕೊಡಂಗೆ ಬಳಿ ನಡೆದಿದೆ.
ಕೇರಳದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಂಗಳೂರು ಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಕೇರಳದ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಗಡಿ ಪ್ರವೇಶಿಸುತ್ತಿದ್ದ ಕಾರನ್ನು ವಿಟ್ಲ ಪೊಲೀಸರು ತಡೆದು ನಿಲ್ಲಿಸುತ್ತಿದಂತೆ ಕಾರಿನಲ್ಲಿದ್ದ ದುಷ್ಕರ್ಮಿಗಳು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.ದಾಳಿ ಬಳಿಕ ಕಾರಿನಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳ ಬೆನ್ನಟ್ಟಿದ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಳಿ ಕಾರನ್ನು ಅಡ್ಡಗಟ್ಟಿ ಮೂವರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಾಕಿರ್ ಯಾನೆ ಮಹಮ್ಮದ್ ವಾಕೀರ್, ಅಬ್ದುಲ್ ಲತೀಫ್, ಅಸ್ಪಕ್ ಎಂದು ಗುರುತಿಸಲಾಗಿದೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ. ಗುಂಡಿನ ದಾಳಿಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿನೋದ್ ರೆಡ್ಡಿ ಗಾಯಗೊಂಡಿದ್ದಾರೆ.