
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧವೇ ಅಸಮಾಧಾನ ಹೊರಹಾಕಿದ್ದು, ಬ್ಲ್ಯಾಕ್ ಮೇಲ್ ಮಾಡಿದವರಿಗೆ, ಹಣ ನೀಡಿದವರಿಗೆ ಸಿಎ ಯಡಿಯೂರಪ್ಪ ಸಚಿವ ಸ್ಥಾನ ನೀಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದವರಿಗೆ, ವಿಜಯೇಂದ್ರಗೆ ಹಣ ಸಂದಾಯ ಮಾಡಿದವರಿಗೆ ಸಚಿವ ಸ್ಥಾನ ನೀಡುತ್ತಿದ್ದಾರೆ. ಹೀಗೆ ಮೂವರು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ಓರ್ವನನ್ನು ರಾಜಕೀಯ ಕಾರ್ಯದರ್ಶಿಯನ್ನಾಗಿ, ಇನ್ನಿಬ್ಬರನ್ನು ಮಂತ್ರಿಗಳನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಾಂಗ್ರೆಸ್ ನಾಯಕರನ್ನು ಕೂಡ ಖರೀದಿ ಮಾಡುತ್ತಿದ್ದಾರೆ. ಇಂದು ವಿಪಕ್ಷ ಎಂಬುದು ಇಲ್ಲದಂತಾಗಿದೆ. ಎಲ್ಲವೂ ಅಡ್ಜಸ್ಟ್ ಮೆಂಟ್. ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಅಹ್ಮದ್, ಜಾರ್ಜ್ ಅವರನ್ನು ಕೂಡ ಯಡಿಯೂರಪ್ಪ ಖರೀದಿ ಮಾಡಿದ್ದಾರೆ ಎಂದು ಗುಡುಗಿದರು.