ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರವಾಹದ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ತೀರದಲ್ಲಿರುವ ಅಡಿಬಟ್ಟಿ, ಹುಣಶ್ಯಾಳ ಪಿವಾಯ್, ಢವಳೇಶ್ವರ ಹಾಗೂ ಅರಳಿಮಟ್ಟಿ ಗ್ರಾಮಗಳನ್ನು ಸ್ಥಳಾಂತರಗೊಳಿಸಿ ನೆರೆ ಸಂತ್ರಸ್ಥರಿಗೆ ಪರ್ಯಾಯ ವಸತಿ ಸೌಲಭ್ಯವನ್ನು ಕಲ್ಪಿಸುವಂತೆ ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪ್ರವಾಹ ಸಂಬಂಧ ನಡೆಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೂಡಲೇ ನೆರೆ ಸಂತ್ರಸ್ಥರಿಗೆ ಸೂರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು.
ಅಗಸ್ಟ್ ಮೊದಲ ಮತ್ತು ಎರಡನೇ ವಾರದಲ್ಲಿ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ಅಪಾರ ಹಾನಿಯಾಗಿದೆ. ಈಗಾಗಲೇ ಮನೆಗಳ ಸಮೀಕ್ಷೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಲ್ಲಿ ನಿಜವಾದ ಫಲಾನುಭವಿಗಳಿಗೆ ಸಮೀಕ್ಷೆ ಕಾರ್ಯದಲ್ಲಿ ವ್ಯತ್ಯಾಸವಾಗಿದೆ. ಸಮೀಕ್ಷೆ ಪ್ರಕಾರ ಕೆಲವೊಂದು ಸಿ ವರ್ಗದಲ್ಲಿರುವ ಮನೆಗಳು ಕೂಡ ವಾಸಿಸಲಿಕ್ಕೆ ಯೋಗ್ಯವಾಗಿಲ್ಲ. ಅವರಿಗೆ ಸರ್ಕಾರ ೫೦ ಸಾವಿರ ರೂ. ಪರಿಹಾರ ನೀಡುತ್ತಿದೆ. ಇಂತಹ ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯಡಿ ಸೇರ್ಪಡೆಗೊಳಿಸಲು ಅಗತ್ಯ ಮಾರ್ಪಾಡುಗಳನ್ನು ಮಾಡಿ ಸಿ ವರ್ಗದ ಫಲಾನುಭವಿಗಳಿಗೆ ಒಂದುವರೆ ಲಕ್ಷ ರೂ. ಪರಿಹಾರ ನೀಡಲು ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಿದರು.
ಮಳೆ ಹಾಗೂ ಪ್ರವಾಹದಿಂದಾಗಿ ಮೂಡಲಗಿ ವಲಯದ ೧೯೪ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಒಟ್ಟು ೪೪೯ ಕೊಠಡಿಗಳು ದುರಸ್ತಿಯಲ್ಲಿದ್ದು, ಇವುಗಳ ದುರಸ್ತಿಗಾಗಿ ೫.೨೮ ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ. ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೆರೆಹಾವಳಿಯಿಂದ ಕ್ಷೇತ್ರದಲ್ಲಿ ಅಂದಾಜು ೧೦ ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಕೂಡಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಿ ಹಾನಿಗೀಡಾದ ರೈತರಿಗೆ ಬೆಳೆ ಪರಿಹಾರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಡಾ.ಜಿ.ಎಸ್. ಬೊಮ್ಮನಹಳ್ಳಿ, ಜಿಪಂ ಸಿಇಓ ಕೆ.ವ್ಹಿ. ರಾಜೇಂದ್ರ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಿಕ, ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ ದಿಲಶಾದ ಮಹಾತ, ಶಿಕ್ಷಣಾಧಿಕಾರಿಗಳಾದ ಅಜೀತ ಮನ್ನಿಕೇರಿ, ಜಿ.ಬಿ. ಬಳಗಾರ, ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ, ಮತ್ತು ತೋಟಗಾರಿಕೆ ಇಲಾಖೆಯ ಅನೀಲ ಮಾಂಗಳೇಕರ ಸೇರಿದಂತೆ ಇತರೇ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ