ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೇಂದ್ರ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಬುಧವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಡೆಸಿದ ದೊಡ್ಡ ಮಟ್ಟದ ಕಾರ್ಯಕ್ರಮ ಇದಾಗಿತ್ತು. ರಾಜ್ಯದ ಬೇರೆ ಬೇರೆ ಭಾಗಗಳಿದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಆಗಮಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಧೈರ್ಯ, ವಿಶ್ವಾಸ ತುಂಬಲು ಈ ರಾಜಭವನ ಚಲೋ ಕಾರ್ಯಕ್ರಮ ಯಶಸ್ವಿಯಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರತಿಭಟನಾ ಕಾರ್ಯಕ್ರಮದಲ್ಲಿ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಎಲ್ಲರ ಗಮನಸೆಳೆದರು. ಬೆಳಗಾವಿಯಿಂದ ಮಂಗಳವಾರ ನೂರಾರು ರೈತರೊಂದಿಗೆ ಬಸ್ ನಲ್ಲಿ ತೆರಳಿದ ಲಕ್ಷ್ಮಿ ಹೆಬ್ಬಾಳಕರ್, ಬುಧವಾರದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದು ಘೋಷಣೆಗಳನ್ನು ಕೂಗಿದರು.
ರಾತ್ರಿಯೆಲ್ಲ ಪ್ರಯಾಣ ಮಾಡಿ ಸುಸ್ತಾಗಿದ್ದರೂ ಪೂರ್ಣ ಪ್ರತಿಭಟನೆಯಲ್ಲಿ ಲವಲವಿಕೆಯಿಂದಲೇ ಪಾಲ್ಗೊಂಡಿದ್ದರು. ಬಹುತೇಕ ಮಾಧ್ಯಮಗಳ ಕ್ಯಾಮೆರಾಗಳು ಲಕ್ಷ್ಮಿ ಹೆಬ್ಬಾಳಕರ್ ಅವರೆಡೆಗಿದ್ದಿದ್ದಲ್ಲದೆ, ಹಲವು ಟಿವಿ ವಾಹಿನಿಗಳು ಬೈಟ್ ತೆಗೆದುಕೊಳ್ಳುವ ಮೂಲಕ ಪ್ರಾಧಾನ್ಯತೆ ನೀಡಿದವು.
ಒಟ್ಟಾರೆ ಲಕ್ಷ್ಮಿ ಹೆಬ್ಬಾಳಕರ್ ಬುಧವಾರದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಲ್ಲರ ಗಮನಸೆಳೆದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ