*ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಮಟ್ಟದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸಿಫ್ (ರಾಜು) ಶೇಟ್ ಅವರು ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಆರೋಗ್ಯ ಸೇರಿದಂತೆ ವಿವಿಧ ಜನಪರ ಯೋಜನೆಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ಒದಗಿಸುತ್ತಿದ್ದು, ಪ್ರತಿಯೊಬ್ಬರೂ ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಕ್ಕಳನ್ನು ಪೋಲಿಯೋದಿಂದ ಉಂಟಾಗುವ ಅಂಗವೈಕಲ್ಯ ಹಾಗೂ ಮರಣದಿಂದ ರಕ್ಷಿಸುವ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದೆ. ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ನಿರಂತರವಾಗಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಭಾರತವು ಪೋಲಿಯೋ ನಿರ್ಮೂಲನೆ ಸಾಧಿಸಿದೆ. ಆದಾಗ್ಯೂ, ನೆರೆ ರಾಷ್ಟ್ರಗಳಲ್ಲಿ ಇನ್ನೂ ಪೋಲಿಯೋ ಸೋಂಕು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಇತರ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯ ಎಲ್ಲಾ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಗರ ಸೇವಕರ ರಾಜಶೇಖರ ಡೋಣಿ ಅವರು ಮಾತನಾಡಿ, ಈಗಾಗಲೇ ಪೋಲಿಯೋ ಭಾರತದಿಂದ ನಿರ್ಮೂಲನೆಯಾಗಿದ್ದು, 2014 ರಲ್ಲಿ ವಿಶ್ವ ಆರೋಗ್ಯ ಸಂಸ್ತೆಯು ಭಾರತವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿ ಪ್ರಮಾಣ ಪತ್ರ ನೀಡಿದೆ. 2012 ರಿಂದ ಭಾರತ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ ಆದರೂ ಸಹ ನೆರೆ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಪೊಲಿಯೋ ಲಸಿಕೆಯನ್ನು ಈಗಲೂ ಭಾರತದಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ರಮೇಶ್ ದಂಡಗಿ ಅವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಹಾಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಮಹತ್ವವನ್ನು ವಿವರಿಸಿ ಬೆಳಗಾವಿ ಜಿಲ್ಲೆಯಲ್ಲಿ 0-5 ವರ್ಷದೊಳಗಿನ 471041 ಮಕ್ಕಳ ಗುರಿ ಹೊಂದಲಾಗಿದ್ದು, ಇದಕ್ಕಾಗಿ 2331 ಲಸಿಕಾ ಕೇಂದ್ರಗಳನ್ನು, 49 ಸಂಚಾರಿ ತಂಡಗಳನ್ನು , 74 ಟ್ರಾನ್ಸಿಟ್ ತಂಡಗಳನ್ನು ಹಾಗೂ 9514 ಲಸಿಕಾ ಕಾರ್ಯಕರ್ತರನ್ನು ಹಾಗೂ 618 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ವೇದಿಕೆಯ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಐ.ಪಿ. ಗಡಾದ್, ನಗರ ಸೇವಕರಾದ ಲಕ್ಷ್ಮೀ ರಾಠೋಡ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಎಸ್.ಎಸ್. ಸಾಯನ್ನವರ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಸಂಜಯ ದೊಡಮನಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯಕ್ರಮಾಧಿಕಾರಿಗಳಾದ ಕಾಂಚನಾ ಅಮಟೆ, ಜಿಲ್ಲಾ ಕಾರಾಗೃಹ ವೈದ್ಯಾಧಿಕಾರಿಗಳಾದ ಡಾ. ಸಂಜಯ್ ಡುಮ್ಮಗೋಳ ಹಾಗೂ ಬೆಳಗಾವಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ನಾಡಗೀತೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರಕಾಶ ಮಾನೆ ನೇರೆವೇರಿಸಿ ವಂದಿಸಿದರು.




