ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೇಂದ್ರದಲ್ಲಿ ನರೇಂದ್ರ ಮೋದಿ ರೀತಿಯಲ್ಲೇ ಕರ್ನಾಟಕದಲ್ಲಿ ಯಡಿಯೂರಪ್ಪ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೋನಾ ಸೇರಿದಂತೆ ಕರ್ನಾಟಕದಲ್ಲಿ ಯಡಿಯೂರಪ್ಪ ಸರಕಾರ ಎಲ್ಲ ವಿಷಯಗಳಲ್ಲಿ ಅತ್ಯುತ್ತಮವಾಗಿ ಆಡಳಿತ ನಿರ್ವಹಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಂಸಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರದ ಆಡಳಿತವನ್ನು, ತೆಗೆದುಕೊಂಡಿರುವ ಕ್ರಮಗಳನ್ನು ಮುಕ್ತಕಂಠದಿಂದ ಹೊಗಳಿದರು.
ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಂಡು ಕೊರೊನಾಮುಕ್ತ ಭಾರತಕ್ಕೆ ಕೈಜೋಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿಕೊಂಡರು.
ಭಾರತದಲ್ಲಿ ಕೋವಿಡ್-೧೯ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ ಕಾರಣಕ್ಕೆ ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮರಣ ಪ್ರಮಾಣ ನಿಯಂತ್ರಿಸುವುದು ಸಾಧ್ಯವಾಗಿದೆ.
ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡ ಕೋವಿಡ್-೧೯ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸುವ ಮೂಲಕ ಕೋವಿಡ್ ನಿಯಂತ್ರಣದಲ್ಲಿ ಯಶಸ್ವಿಯಾಗಿದೆ ಎಂದು ಸ್ವತಃ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಕರ್ನಾಟಕದ ಇತಿಹಾಸ; ಭಾರತಕ್ಕೆ ಪ್ರೇರಣಾಶಾಲಿ: ಕರ್ನಾಟಕದ ಇತಿಹಾಸ ಇಡೀ ಭಾರತಕ್ಕೆ ಪ್ರೇರಣಾಶಾಲಿಯಾಗಿದೆ ಎಂದು ಹೇಳಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಬೆಳವಡಿ ಮಲ್ಲಮ್ಮನ ಶೌರ್ಯಗಾಥೆ ನೆನಪಿಸಿಕೊಂಡರು.
ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮವನ್ನು ಕೊಂಡಾಡಿದ ಅವರು, ದೇಶಕ್ಕಾಗಿ ಬಲಿದಾನಗೈದವರಿಗೆ ಸ್ಮರಿಸಿದರು.
ದಿ.ಸುರೇಶ್ ಅಂಗಡಿ ಸ್ಮರಣೆ: ದಿ.ಸುರೇಶ್ ಅಂಗಡಿ ಅವರ ಅಕಾಲಿಕ ಸಾವಿನಿಂದಾಗಿ ಪಕ್ಷ ಮತ್ತು ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಅಮಿತ್ ಶಾ ಬೇಸರ ವ್ಯಕ್ತಪಡಿಸಿದರು.
ಕನ್ನಡ-ಮರಾಠಿ ಸಮ್ಮಿಳಿತ ಸಂಸ್ಕೃತಿಯ ಮುಂಬೈ ಕರ್ನಾಟಕ ಪ್ರದೇಶವು ಭಾರತದ ವೈವಿಧ್ಯತೆಗೆ ಸಾಕ್ಷಿಯಾಗಿದೆ ಎಂದರು.
ನೂತನ ಗ್ರಾಪಂ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬರುವ ತಾಪಂ,ಜಿಪಂ ಚುನಾವಣೆಯಲ್ಲಿ ಶೇ.75ಕ್ಕಿಂತಲೂ ಹೆಚ್ಚು ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು ಎಂದರು.
ಗ್ರಾಮ ಪಂಚಾಯ್ತಿಯ ಒಟ್ಟು ಸದಸ್ಯರಲ್ಲಿ ಶೇ.55 ಕ್ಕೂ ಅಧಿಕ ಸದಸ್ಯರು ಪಕ್ಷದ ಕಾರ್ಯಕರ್ತರಾಗಿದ್ದಾರೆ. ರಾಜ್ಯದ ಜನರು ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈಬಲಪಡಿಸಿದ್ದೀರಿ ಎಂದರು.
ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಮೂಲಕ ಬಡಜನರ ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬದ್ಧತೆ ತೋರಿಸಿದೆ ಎಂದರು.
2022 ಕ್ಕೆ ಮನೆ ಮನೆಗೆ ಶುದ್ಧ ನೀರು:
2022 ರ ವೇಳೆಗೆ ದೇಶದ ಪ್ರತಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಪ್ರತಿಯೊಬ್ಬರು ದೇಶಿಯ ಉತ್ಪನ್ನಗಳ ಬಳಕೆ ಮಾಡಿದರೆ ದೇಶದ ಜಿಡಿಪಿ ತನ್ನಿಂದ ತಾನೇ ಹೆಚ್ಚಾಗಲಿದೆ ಎಂದು ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆತ್ಮನಿರ್ಭರ್ ಯೋಜನೆಯ ಬಗ್ಗೆ ವಿವರಿಸಿದರು.
ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ಆರಂಭಗೊಳ್ಳಲಿರುವುದರಿಂದ ಮುಂಬರುವ ದಿನಗಳಲ್ಲಿ ಚೈನಾದಿಂದ ಆಟಿಕೆ ಆಮದು ಮಾಡಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಅಮಿತ್ ಶಾ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಜೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ನೂತನ ಸಚಿವರಾದ ಉಮೇಶ್ ಕತ್ತಿ ಮತ್ತಿತರರು ಮಾತನಾಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಪಿ.ಯೋಗೀಶ್ವರ್, ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವಿಧಾನಪತಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡಗೌಡ್ರ, ಪಿ.ರಾಜೀವ, ಅಭಯ್ ಪಾಟೀಲ, ದುರ್ಯೋಧನ ಐಹೊಳೆ, ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ ಮತ್ತಿತರರು ಉಪಸ್ಥಿತರಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ