*ಮೋದಿ ಸೋಲಿನ ಭೀತಿಯಿಂದ ಹತಾಶಯರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ *
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್ ಡಿಎ, ಮೈತ್ರಿಕೂಟ ಸೋಲುವುದು ಗೊತ್ತಾಗಿದ್ದು, ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ದೇವರೇ ನನ್ನನ್ನು ಕಳುಹಿಸಿದ್ದಾನೆ ಎಂದು ಮಾತಾಡುವ ಮಟ್ಟಕ್ಕೆ ಸೋಲಿನ ಸುಳಿವು ಮೋದಿಯವರನ್ನು ಕಾಡುತ್ತಿದೆ ಎಂದು ಹೇಳಿದರು.
ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು, ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ. ಇನ್ನು ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ. ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ನೆಹರೂ ಅವರ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ಮೋದಿ ಅವರು, ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದರು.
ನೆಹರೂ ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ, ಆರ್ ಎಸ್ ಎಸ್ ಮತ್ತು ಸಂಘ ಪರಿವಾರ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ಬಿಜೆಪಿಯವರಿಂದ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ