ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗ ಸಿಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ -ಉಚಗಾಂವ ಗ್ರಾಮದಲ್ಲಿ ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ಹಾಗೂ ಬೆನಕನಹಳ್ಳಿ ಗ್ರಾಮದಲ್ಲಿ ಸುಮಾರು 2 ಕೋಟಿ ರೂ,ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಸೇತುವೆಗಳನ್ನು (ಬ್ರಿಡ್ಜ್) ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ 5 ವರ್ಷಗಳಿಂದ ನಮ್ಮ ಸರಕಾರ ಇಲ್ಲದಿದ್ದರೂ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ತಂದಿದ್ದೇನೆ. ಈಗ ಸರಕಾರದ ಗ್ಯಾರಂಟಿ ಯೋಜನೆಗಳು ಕ್ಷೇತ್ರದ ಮಹಿಳೆಯರು ಸೇರಿದಂತೆ ಎಲ್ಲರಿಗೂ ಬಲ ತರಲಿದೆ. ಅದರ ಜೊತೆಗೆ ಅನೇಕ ದೊಡ್ಡ ಯೋಜನೆಗಳನ್ನು ತರುವ ಕನಸು ಇದೆ. ಶಿಕ್ಷಣ, ಕೈಗಾರಿಕೆ, ಆರೋಗ್ಯ ಕ್ಷೇತ್ರದಲ್ಲಿ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು. ಹಂತ ಹಂತವಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಅವರು ತಿಳಿಸಿದರು.
ನಿಮ್ಮೆಲ್ಲರ ಆಶಿರ್ವಾದದಿಂದ ಇಡೀ ರಾಜ್ಯದ ಮಹತ್ವದ ಇಲಾಖೆಯ ಜವಾಬ್ದಾರಿ ನನ್ನ ಹೆಗಲಿಗೆ ಬಿದ್ದಿದೆ. ಜೊತೆಗೆ ಉಡುಪಿ ಜಿಲ್ಲೆಯ ಉಸ್ತುವಾರಿಯ ಹೊಣೆಯೂ ಇದೆ. ಅವೆಲ್ಲವನ್ನೂ ನಿಭಾಯಿಸುತ್ತಲೇ ಕ್ಷೇತ್ರದ ಮತದಾರರ ಮನೆ ಮಗಳಾಗಿ ಈ ಜವಾಬ್ದಾರಿಯನ್ನು ಮರೆಯಲು ಸಾಧ್ಯವಿಲ್ಲ. ನಮ್ಮ ಇಡೀ ಕುಟುಂಬ ನಿಮ್ಮ ಜೊತೆಗಿರಲಿದೆ. ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಮಾರ್ಗದರ್ಶನವಿರಲಿ ಎಂದು ಕೋರಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿದಂತೆ ಹಲವಾರು ಪ್ರಮುಖರು, ಅಧಿಕಾರಿಗಳು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ