ಪ್ರಗತಿವಾಹಿನಿ ಸುದ್ದಿ: ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಾಹಾಪೂರ ತಾಲೂಕಿನ ದೋರೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಾಹಾಪೂರ ತಾಲೂಕಿನ ಉರ್ದು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೀರೆ ಅಗಸಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ರಾತ್ರಿವೇಳೆ ಮಕ್ಕಳ ಸಂಖ್ಯೆ 100ರ ಗಡಿ ದಾಟಿದೆ
ಬಿಸಿಯೂಟದಲ್ಲಿ ಕೊಟ್ಟ ಅನ್ನ ಸಾಂಬಾರ್ ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು ಮತ್ತೆ ಕೆಲವರಿಗೆ ಹೊಟ್ಟೆ ನೋವು. ಇನ್ನು ಕೆಲವರಿಗೆ ತಲೆಸುತ್ತು ಬಂದಿದೆ ಎಂದು ಹೇಳಲಾಗಿದೆ. ಅಸ್ವಸ್ಥಗೊಂಡ ಮಕ್ಕಳನ್ನು ಗ್ರಾಮದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನಿನ್ನೆ ಮಧ್ಯಾಹ್ನ ಊಟ ಮಾಡುವಾಗ ಕೆಲ ಮಕ್ಕಳ ಊಟದಲ್ಲಿ ಬಳೆ ಚೂರುಗಳು ಕಂಡುಬಂದಿವೆ ಎಂದು ಬಿಸಿಯೂಟ ಸೇವಿಸಿದ ಮಕ್ಕಳು ತಿಳಿಸಿದ್ದಾರೆ. ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಯಾದರಿ ಶಾಸಕ ಚನ್ನಾರೆಡ್ಡಿ ತುನ್ನೂರ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ