Kannada NewsKarnataka NewsLatest

ಸಂಸದ ಅಣ್ಣಾಸಾಹೇಬ ಜೊಲ್ಲೆ ಮನವಿ : ಕೃಷ್ಣಾ ಮತ್ತು ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಮ್ಮತಿಸಿದ ಡಿಸಿಎಂ ಫಡ್ನವಿಸ್

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಕೃಷ್ಣಾ ಮತ್ತು ಹಿರಣ್ಯಕೇಶಿ ನದಿಗೆ ನೀರು ಬಿಡಲು ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವಿಸ್ ಸಮ್ಮತಿ ಸೂಚಿಸಿದ್ದಾರೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಅವರು ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರಿನ ಒಳಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚಿನ ನೀರನ್ನು ಬಿಡುವಂತೆ ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದರು.

ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರೈತರ ಬೆಳೆಗಳಿಗೂ ನೀರಿನ ಸಮಸ್ಯೆ ಎದುರಾಗಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು, ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ತಕ್ಷಣವೇ ಕೋಯ್ನಾ ಮತ್ತು ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ೩ ಟಿಎಮ್‌ಸಿ ನೀರು ಮತ್ತು ಚಿತ್ರಾ ಅಣೆಕಟ್ಟಿನಿಂದ ಹಿರಣ್ಯಕೇಶಿಗೆ ೧ ಟಿ.ಎಂ.ಸಿ ನೀರು ಬಿಡುವಂತೆ ಸೂಚಿಸಿದ್ದು, ಅವರಿಗೆ ಕ್ಷೇತ್ರದ ಜನರ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.
ನಿಪ್ಪಾಣಿ ಮತಕ್ಷೇತ್ರದ ಚುನಾವಣೆ ಉಸ್ತುವಾರಿಯಾದ ಡಾ. ಅಜೀತ ಘೋಪಛಾಡೆ, ಮಹಾದೇವ ರಾಯಜಾಧವ, ಮಹಾದೇವ ರೆಂದಾಳೆ, ಸುರೇಶ ಬಿರಾದಾರ ಉಪಸ್ಥಿತರಿದ್ದರು.

https://pragati.taskdun.com/variation-in-water-supply-in-belgaum-for-two-days/



ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button