*ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಬೇಸಿಗೆ ತಾಪಮಾನ ಹೆಚ್ಚಿರುವ ಕಾರಣ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ ಹಾಗಾಗಿ ಅಂತಹ ಸ್ಥಳಗಳಲ್ಲಿ ಮುಂಚಿತವಾಗಿಯೇ ಕುಡಿಯುವ ನೀರು ಪೂರೈಕೆಗೆ ಆಯಾ ತಹಶೀಲ್ದಾರ್ ಗಳು, ಎಲ್ಲಾ ಸಂಬಂಧಿಸಿದ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಏ.15) ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಸಲ್ಲಿಸಲಾದ ಪ್ರಸ್ತಾವನೆಗೆ ಅನುಮತಿ ದೊರಕಿದ್ದು, ಪ್ರಸ್ತಾವನೆಗೆ ಅನುಗುಣವಾಗಿ ಕಾಮಗಾರಿಗಳನ್ನು ಪ್ರಾರರಂಭಿಸಲು ಕ್ರಮ ವಹಿಸುವಂತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾದಲ್ಲಿ ಕುಡಿಯುವ ನೀರು ಪೂರೈಕೆಗೆ ಸಿದ್ಧತೆಯಲ್ಲಿ ಇರಬೇಕು. ಒಂದುವೇಳೆ ನೀರಿನ ಸಮಸ್ಯೆಯಾದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಅಗತ್ಯದ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳುವಂತೆ ಹೇಳಿದರು.
ಬೇಸಿಗೆ ದಿನದಲ್ಲಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಮನದಲ್ಲಿಟ್ಟುಕೊಂಡು ನೀರು ಬಿಡಗಡೆಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಕುಡಿಯುವ ನೀರು ಪೂರೈಕೆ
ಬೇಸಿಗೆ ಸಮಯದಲ್ಲಿ ನಗರ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಗ್ರಾಮೀಣ ಭಾಗದಲ್ಲಿ ಯಾವುದೇ ನೀರಿನ ಅಭಾವ ಕಂಡು ಬಂದಿರುವುದಿಲ್ಲ. ಹಾಗಾಗೀ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿಲ್ಲ ಎಂದು ಸಂಬಂಧಿಸಿದ ಅಧಿಕಾರಿಗಳು ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ರಾಹುಲ್ ಶಿಂಧೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ತೊಂದರೆಯಾದಲ್ಲಿ ಆಯಾ ಪಂಚಾಯತಿಗಳಿಂದ ನೀರು ಸರಬರಾಜು ಮಾಡಲು ಸೂಚನೆ ನೀಡಲಾಗಿದೆ. ಬರುವ ದಿನಗಳಲ್ಲಿ ಬೇಸಿಗೆ ನಿರ್ವಹಣೆಗೆ ಖಾಸಗಿ ಟ್ಯಾಂಕರ್ ಗಳಿಂದ ನೀರು ಪೂರೈಕೆಗೆ ಟೆಂಡರ್ ಪ್ರಕ್ರಿಯೆಗೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಮಹಾನಗರ ಪಾಲಿಕೆ ಆಯುಕ್ತರಾದ ಶುಭ.ಬಿ, ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.