Belagavi NewsBelgaum NewsKarnataka News

*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಗೆ ವೇಗ: ₹4.07 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ*

ಮುತಗಾ, ಬಾಳೇಕುಂದ್ರಿ, ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ ಹಾಗೂ ಸುಳಗಾ ಯಳ್ಳೂರ್ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಮೂಲಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಭಾನುವಾರ ಹಲವು ಗ್ರಾಮಗಳಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.


ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮುತಗಾ, ಬಾಳೇಕುಂದ್ರಿ ಕೆ.ಎಚ್., ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ. ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಮುತಗಾದಲ್ಲಿ ₹90 ಲಕ್ಷದ ಕಾಮಗಾರಿಗಳು

ಮುತಗಾ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸುಮಾರು ₹90 ಲಕ್ಷ ವೆಚ್ಚದಲ್ಲಿ ನೂತನ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ ನೆರವೇರಿಸಿದರು.


ದೀರ್ಘಕಾಲದಿಂದ ಸಮರ್ಪಕ ರಸ್ತೆಗಳ ಕೊರತೆಯಿಂದಾಗಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಎದುರಿಸುತ್ತಿದ್ದ ಸಂಚಾರ ಸಮಸ್ಯೆಗೆ ಈ ಕಾಮಗಾರಿಗಳಿಂದ ಪರಿಹಾರ ದೊರೆಯಲಿದೆ. ಮಳೆಗಾಲದಲ್ಲಿ ನೀರು ನಿಲ್ಲುವುದು ಹಾಗೂ ಚರಂಡಿ ವ್ಯವಸ್ಥೆಯ ಕೊರತೆಯಿಂದ ಉಂಟಾಗುತ್ತಿದ್ದ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.


ಇದೇ ಸಂದರ್ಭದಲ್ಲಿ ಮುತಗಾ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಕ್ಕಳ ಆರೋಗ್ಯ, ಪೌಷ್ಟಿಕಾಂಶ ಹಾಗೂ ಕೇಂದ್ರದಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಅಂಗನವಾಡಿಯ ಮೂಲಸೌಕರ್ಯಗಳನ್ನು ಪರಿಶೀಲಿಸಿ, ಅಗತ್ಯವಿರುವ ಸೌಲಭ್ಯಗಳು ಮತ್ತು ಕುಂದುಕೊರತೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಬಾಳೇಕುಂದ್ರಿ ಕೆ.ಎಚ್.ನಲ್ಲಿ ₹75 ಲಕ್ಷದ ರಸ್ತೆ–ಚರಂಡಿ ಕಾಮಗಾರಿ

ಬಾಳೇಕುಂದ್ರಿ ಕೆ.ಎಚ್. ಗ್ರಾಮದ ಆಂತರಿಕ ಹಾಗೂ ಹೊರವಲಯದ ಪ್ರದೇಶಗಳಲ್ಲಿ ಸುಮಾರು ₹75 ಲಕ್ಷ ವೆಚ್ಚದಲ್ಲಿ ನೂತನ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮದ ವಿವಿಧ ಭಾಗಗಳ ಸಂಪರ್ಕವನ್ನು ಸುಧಾರಿಸುವುದರೊಂದಿಗೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಬಲಪಡಿಸುವುದು ಕಾಮಗಾರಿಗಳ ಉದ್ದೇಶವಾಗಿದೆ.

ಹೊನ್ನಿಹಾಳದಲ್ಲಿ ₹46 ಲಕ್ಷದ ಅಭಿವೃದ್ಧಿ ಕಾಮಗಾರಿ

ಹೊನ್ನಿಹಾಳ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸುಮಾರು ₹46 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.


ಸಾರ್ವಜನಿಕರ ಸುಗಮ ಸಂಚಾರ ಹಾಗೂ ನೈರ್ಮಲ್ಯ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಮೂಲಸೌಕರ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಳೇಕುಂದ್ರಿ ಬಿ.ಕೆ.ಯಲ್ಲಿ ₹96 ಲಕ್ಷದ ಕಾಮಗಾರಿಗಳಿಗೆ ಚಾಲನೆ

ಬಾಳೇಕುಂದ್ರಿ ಬಿ.ಕೆ. ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸುಮಾರು ₹96 ಲಕ್ಷ ವೆಚ್ಚದಲ್ಲಿ ನೂತನ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ರಸ್ತೆ ಹಾಗೂ ಚರಂಡಿ ವ್ಯವಸ್ಥೆಯ ಸುಧಾರಣೆಯಿಂದ ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಿದಂತಾಗಲಿದೆ.

ಮಾರಿಹಾಳ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ

ಇದಾದ ಬಳಿಕ ಮಾರಿಹಾಳ ಗ್ರಾಮದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ, ಅಮ್ಮನವರ ದರ್ಶನ ಪಡೆದು ಆಶೀರ್ವಾದ ಪಡೆದರು.


ಮುಂದಿನ ವರ್ಷ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಗ್ರಾಮದಲ್ಲಿ ಅಗತ್ಯವಿರುವ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಅವರು ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಿದರು.

ಸುಳಗಾ ಯಳ್ಳೂರಿನಲ್ಲಿ ₹1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

ಸುಳಗಾ ಯಳ್ಳೂರು ಗ್ರಾಮದಲ್ಲಿಯೂ ಸುಮಾರು ₹1 ಕೋಟಿ ವೆಚ್ಚದಲ್ಲಿ ಗ್ರಾಮದೊಳಗಿನ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.


ಗ್ರಾಮದ ಆಂತರಿಕ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.


ಒಂದೇ ದಿನದಲ್ಲಿ ಮುತಗಾ, ಬಾಳೇಕುಂದ್ರಿ ಕೆ.ಎಚ್., ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ. ಹಾಗೂ ಸುಳಗಾ ಯಳ್ಳೂರು ಗ್ರಾಮಗಳಲ್ಲಿ ಒಟ್ಟು ಸುಮಾರು ₹4.07 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಚಾಲನೆ ದೊರೆತಂತಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಸಾರ್ವಜನಿಕರ ಸುಗಮ ಸಂಚಾರ, ಉತ್ತಮ ನೈರ್ಮಲ್ಯ ಹಾಗೂ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ನಮ್ಮ ಮೂಲ ಉದ್ದೇಶ. ಕ್ಷೇತ್ರದ ಯಾವುದೇ ಗ್ರಾಮ ಅಭಿವೃದ್ಧಿಯಿಂದ ವಂಚಿತವಾಗಬಾರದು. ಜನರ ಅಗತ್ಯಗಳಿಗೆ ಸ್ಪಂದಿಸಿ ಹಂತ ಹಂತವಾಗಿ ಎಲ್ಲ ಗ್ರಾಮಗಳಲ್ಲೂ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು” ಎಂದು ಹೇಳಿದರು.


ವಿವಿಧ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button