
ಪ್ರಗತಿವಾಹಿನಿ ಸುದ್ದಿ: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಅರಮನೆಯ ಬಳಿ ನಿನ್ನೆ ಬಲೂನು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಳಿ ಇದ್ದ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಬಲೂನು ಮಾರಾಟ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗಾಯಾಳುಗಳಲ್ಲಿ ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮಂಜುಳಾ ಮೃತ ಮಹಿಳೆ. ಮೈಸೂರು ಜಿಲ್ಲೆಯ ನಂಜನಗೂಡು ಮೂಲದವರಾಗಿದ್ದ ಮಂಜುಳಾ ಹೂ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ನಿನ್ನೆ ಮೈಸೂರಿಗೆ ಬಂದಿದ್ದ ವೇಳೆ ದುರಂತ ಸಂಭವಿಸಿತ್ತು. ಚಿಕಿತ್ಸೆ ಫಲಿಸದೇ ಕೆ.ಆರ್.ಆಸ್ಪತ್ರೆಯಲ್ಲಿ ಮಂಜುಳಾ ಸಾವನ್ನಪ್ಪಿದ್ದಾರೆ. ಗಾಯಾಳು ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.


