ಪ್ರಗತಿವಾಹಿನಿ ಸುದ್ದಿ; ಮೈಸೂರು: ದೇಶ ಹಾಗೂ ರಾಜ್ಯ ಕೊರೋನಾ ಮುಕ್ತವಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಕೋರಿಕೊಂಡಿದ್ದೇನೆ. ದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವೈದ್ಯರು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ದಾದಿಯರು ಕೊರೋನಾ ಸಂದರ್ಭದಲ್ಲಿ ವಿಶೇಷ ಸೇವೆ ನೀಡಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು. ಮಾಸ್ಕ್ – ಸಾಮಾಜಿಕ ಅಂತರ – ಸ್ಯಾನಿಟೈಸರ್ ಅನ್ನು ಬಳಸಿ ಕೊರೋನಾ ಹೋಗಲಾಡಿಸಲು ಶ್ರಮಿಸಬೇಕು ಎಂದರು.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ ಪರಿಸ್ಥಿತಿ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಜೊತೆಗೆ ಬೆಂಬಲಕ್ಕೆ ಲಭ್ಯವಿರುವುದಾಗಿ ಹೇಳಿದ್ದರಿಂದ ನೆಮ್ಮದಿ ಉಂಟಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಲಬುರಗಿಯಲ್ಲಿ ಪ್ರವಾಹಪೀಡಿತ ಗ್ರಾಮವೊಂದನ್ನು ಸ್ಥಳಾಂತರ ಮಾಡಲಾಗಿದ್ದು, ಕಂದಾಯ ಮಂತ್ರಿಗಳು ಹಲವು ಕಡೆ ಭೇಟಿ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರವಾಹಪೀಡಿತ ಪ್ರದೇಶಗಳ ನಿರ್ವಹಣೆಗೊಸ್ಕರ 34 ಕೋಟಿ ರೂ.ವನ್ನು ನೇರವಾಗಿ ನೆರೆ ಸಂತ್ರಸ್ತರ ಖಾತೆಗೆ ಹಾಕಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಈಗಾಗಲೇ ಹಣ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಂಪ್ರದಾಯಕ್ಕಾಗಿ ಸರಳ ದಸರಾ ಆಚರಣೆ:
ಇದೇ ವೇಳೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮಾತನಾಡಿ, ಈ ಬಾರಿ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಬೇಕಾದ ಅನಿವಾರ್ಯತೆ ಬಂದಿದೆ. ಆ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರಾದ ಎಸ್ ಟಿ ಎಸ್ ತಿಳಿಸಿದರು.
ರಾಜಪ್ರಭುತ್ವದ ನಂತರ ಈ ಸಂಪ್ರದಾಯವನ್ನು ಕರ್ನಾಟಕ ಸರ್ಕಾರ ಆಚರಿಸಿಕೊಂಡು ಬಂದಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದು. ಕೊರೋನಾ ಇದ್ದರೂ ದಸರಾ ಮಹೋತ್ಸವದ ಸಂಪ್ರದಾಯ ಮತ್ತು ಪರಂಪರೆಯನ್ನು ನಿಲ್ಲಿಸಬಾರದು ಎಂಬ ಉದ್ದೇಶದಿಂದ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತವಾಗಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.
ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯುವ ಈ ಬಾರಿಯ ದಸರಾ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಟಿ.ವಿ ಹಾಗೂ ಸೋಷಿಯಲ್ ಮೀಡಿಯಾ ಮೂಲಕ ನೇರಪ್ರಸಾರ ವೀಕ್ಷಿಸಲು ಕೋರುತ್ತಿದ್ದೇನೆ ಎಂದು ಸಚಿವರಾದ ಸೋಮಶೇಖರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಇನ್ನು ಬಹುಮುಖ್ಯವಾಗಿ ಸಾರ್ವಜನಿಕರು ಮಾಸ್ಕ್ ಹಾಕಿಕೊಂಡು, ಸ್ಯಾನಿಟೈಸರ್ ಬಳಸಿ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು. ಅನಗತ್ಯವಾಗಿ ಹೊರಗಡೆ ಓಡಾಡದೆ ಮನೆಯಲ್ಲೇ ಇದ್ದು ದಸರಾ ಆಚರಿಸಬೇಕು ಎಂದು ಸಚಿವರಾದ ಸೋಮಶೇಖರ್ ಮನವಿ ಮಾಡಿದರು.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ: ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು.
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆರು ಕೊರೋನಾ ಯೋಧರನ್ನು ಸನ್ಮಾನಿಸಲಾಯಿತು. ಕೊರೋನಾ ವಾರಿಯರ್ಸ್ ಗಳಾದ ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್ಸ್ ಟೇಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್ ಅವರನ್ನು ಆಯಾ ಕ್ಷೇತ್ರದ ಪ್ರತಿನಿಧಿಗಳನ್ನಾಗಿ ಸನ್ಮಾನಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ