ಸಚಿವ ಚಲುವರಾಯಸ್ವಾಮಿ ಮಾಹಿತಿ
ಪ್ರಗತಿವಾಹಿನಿ ಸುದ್ದಿ: ನಾಗಮಂಗಲದಲ್ಲಿ ನಿನ್ನೆ ಗಣೇಶನ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ನಾಗಮಂಗಲಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಲಾಗುವುದು ಎಂದರು.
ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿದ್ದೇನೆ. ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ನಮ್ಮ ನಾಗಮಂಗಲ ಶಾಂತಿ ಸೌಹಾರ್ದತೆಯ ತಾಣ. ಇಲ್ಲಿ ಯಾವುದೇ ಅನುಚಿತ ಘಟನೆಗೆ ಅವಕಾಶ ಮಾಡಿಕೊಡುವುದಿಲ್ಲ. ಪರಿಸ್ಥಿತಿ ಸದ್ಯಕ್ಕೆ ಹತೋಟಿಗೆ ಬಂದಿದೆ. ಸರವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಗಲಾಟೆ ವೇಳೆ ಅಂಗಡಿಗಳು, ಬೈಕ್ ಗಳಿಗೆ ಹಾನಿಯಾಗಿದೆ. ಪರಿಹಾರ ನಿಡುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ವಿಪಕ್ಷ ನಾಯಕರಾಗಲಿ, ಯಾರೇ ಆಗಲಿ ನಾಗಮಂಗಲ ಗಲಭೆ ವಿಚಾರವಾಗಿ ಯಾರೂ ಕೂಡ ರಾಜಕೀಯ ಮಾಡಬೆಡಿ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ