EducationKarnataka NewsLatest

*ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಯುವಜನರಿಗೆ ತಂತ್ರಜ್ಞಾನಗಳ ಪರಿಚಯ ಮಾಡಿಸಲು ಮತ್ತು ಅವರ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಒಟ್ಟು 50 ಕೃತಕ ಬುದ್ಧಿಮತ್ತೆ (AI) ಪ್ರಯೋಗಾಲಯಗಳನ್ನ ಸ್ಥಾಪಿಸಲು ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.

ಆಯ್ದ ಸರ್ಕಾರಿ ಕಾಲೇಜುಗಳಲ್ಲಿ ಈ ಅತ್ಯಾಧುನಿಕ AI ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ಹೊಸ ಪ್ರಯೋಗಗಳು, ಕೌಶಲ್ಯಾಭಿವೃದ್ಧಿ ಮತ್ತು ನಾವೀನ್ಯತೆಗೆ ಭದ್ರವಾದ ಮೂಲಸೌಕರ್ಯವನ್ನು ಒದಗಿಸಲಿದೆ.

Home add -Advt

2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಕೇಂದ್ರ ಸರ್ಕಾರದ ‘ಎಐ ಮಿಷನ್’ (AI Mission) ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸ್ಥಾಪನೆಯಾಗುವ ಪ್ರತಿ ಪ್ರಯೋಗಾಲಯಕ್ಕೆ ಒಟ್ಟು 68.98 ಲಕ್ಷ ರೂಪಾಯಿ ಆರ್ಥಿಕ ನೆರವು ಸಿಗಲಿದ್ದು, ಮೂರು ವರ್ಷಗಳ ಅವಧಿಯಲ್ಲಿ ಮೂರು ಕಂತುಗಳಲ್ಲಿ ಈ ಹಣ ಬಿಡುಗಡೆಯಾಗಲಿದೆ. ಇದರ ಜೊತೆಗೆ, ಕರ್ನಾಟಕ ಸರ್ಕಾರವು ಈ ಯೋಜನೆಗಾಗಿ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ 6.29 ಕೋಟಿ ರೂಪಾಯಿಗಳನ್ನು ಮೊದಲ ವರ್ಷದಲ್ಲೇ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ.

ಈ ಯೋಜನೆಯ ಮೊದಲ ಹಂತವಾಗಿ ರಾಜ್ಯದ 23 ಪ್ರಮುಖ ಶೈಕ್ಷಣಿಕ ಸಂಸ್ಥೆಗಳನ್ನು ಆಯ್ಕೆ ಮಾಡಲು ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮುಂದಿನ ದಿನಗಳಲ್ಲಿ ಉದ್ಯೋಗದ ಭವಿಷ್ಯವನ್ನು ತಂತ್ರಜ್ಞಾನವೇ ನಿರ್ಧರಿಸಲಿದೆ. ಹೀಗಾಗಿ ಇಂತಹ ಅತ್ಯಾಧುನಿಕ ತಾಂತ್ರಿಕ ಕೌಶಲ್ಯಗಳನ್ನು ಕಲಿಯುವ ಅವಕಾಶಗಳು ಕೇವಲ ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗದೆ ಎಲ್ಲರಿಗೂ ಸಿಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಈ AI ಪ್ರಯೋಗಾಲಯಗಳ ಮೂಲಕ ಸಣ್ಣ ನಗರಗಳ ಯುವಜನರು ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

Related Articles

Back to top button