Kannada NewsKarnataka NewsLatest

*ನಾಳೆ ರಾಜ್ಯಾದ್ಯಂತ ಶಾಲಾ – ಕಾಲೇಜುಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್‌ ನೆಹರು ತಾರಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 11 ಗಂಟೆಗೆ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ.

ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಭೋಧಿಸುವಂತೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ಮಾನ್ಯ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ಫೆ. 28 ರಂದು ಅರ್ಥಪೂರ್ಣ ಕಾರ್ಯಕ್ರಮ:
ರಾಷ್ಟ್ರೀಯ ವಿಜ್ಞಾನ ದಿನವನ್ನ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 11 ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್‌ನ ಮಾನ್ಯ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮಾನ್ಯ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್‌, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌, ಸಚಿವರಾದ ಮಧು ಬಂಗಾರಪ್ಪ ಮತ್ತು ಎಂ ಸಿ ಸುಧಾಕರ್‌ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button