*ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್ಡಿಎ ನಾಯಕರಿಗಿಲ್ಲ: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಆಶಾ ಕಾರ್ಯಕರ್ತೆಯರ ಹೋರಾಟದ ವಿಚಾರವಾಗಿ ಎನ್ಡಿಎ ನಾಯಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್ಡಿಎ ನಾಯಕರಿಗಿಲ್ಲ. ಅವರಿಗೆ ನಿಜವಾಗಿಯೂ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಅನುದಾನ ಹೆಚ್ಚಳಕ್ಕೆ ಧ್ವನಿ ಎತ್ತಲಿ ಎಂದು ಸವಾಲು ಹಾಕಿದ್ದಾರೆ.
ಶುಕ್ರವಾರ ಕೆಂಗೇರಿಯ ಬಿಜಿಎಸ್ ಮೈದಾನದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ವೇತನವನ್ನು ನಮ್ಮ ಸರ್ಕಾರ ಹೆಚ್ಚಿಸಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ಒಂದು ರೂಪಾಯಿಯನ್ನೂ ಹೆಚ್ಚಿಸಿಲ್ಲ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಈ ವಿಚಾರವಾಗಿ ಧ್ವನಿ ಎತ್ತಿಲ್ಲ ಎಂದು ಟೀಕಿಸಿದರು.
ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುವುದಿಲ್ಲ. ಆಶಾ ಕಾರ್ಯಕರ್ತೆಯರ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೆ ತಂದಿದ್ದರು. ಕಾಂಗ್ರೆಸ್ ಸರ್ಕಾರ ಆಶಾ ಕಾರ್ಯಕರ್ತೆಯರ ಪರವಾಗಿದೆ. ಅವರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ ಎಂದರು.
ಸಹಿ ಹಾಕಲೇಬೇಕು ಎಂದು ಪಟ್ಟು ಹಿಡಿದರೆ ಸಾಧ್ಯವಿಲ್ಲ
ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಹಲವು ಕಾರ್ಯಕರ್ತೆಯರು ಕರೆ ಹಾಗೂ ಸಂದೇಶಗಳ ಮೂಲಕ ನಮ್ಮ ಮೇಲೆ ವಿಶ್ವಾಸವಿದ್ದು, ಕೆಲಸಕ್ಕೆ ಮರಳಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರಲ್ಲಿ ಒಡಕು ಮೂಡಬಾರದು ಎಂಬ ಕಾರಣಕ್ಕೆ ತಾವು ಮೌನವಾಗಿದ್ದೇನೆ ಎಂದು ಹೇಳಿದರು.
ನಿಮ್ಮ ಸಮಸ್ಯೆಗಳ ಅರಿವು ನಮಗಿದೆ. ಸೇವೆಯ ಉದ್ದೇಶದಿಂದ ಕೆಲಸಕ್ಕೆ ಬಂದಿರುವ ನೀವು ನಿಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಿ. ಹೋರಾಟ ಮಾಡುವುದು ಪ್ರತಿಯೊಬ್ಬರ ಹಕ್ಕು. ನಿಮ್ಮೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ. ಆದರೆ ಸಹಿ ಹಾಕಲೇಬೇಕು ಎಂದು ಪಟ್ಟು ಹಿಡಿದರೆ ಅದು ಸಾಧ್ಯವಿಲ್ಲ. ನನ್ನ ಮೇಲೆ ವಿಶ್ವಾಸವಿಟ್ಟರೆ ಖಂಡಿತ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು
ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ರಾಜಕೀಯ ಮಾಡುತ್ತಾರೋ ಮಾಡಲಿ. ನನಗೆ ಈ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು. ಅವರ ಹಿತದ ಬಗ್ಗೆ ನಮಗೆ ಕಾಳಜಿ ಇದೆ. ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬರುವಂತೆ ಮತ್ತೊಮ್ಮೆ ವಿನಯದಿಂದ ಮನವಿ ಮಾಡುತ್ತೇನೆ. ಎಲ್ಲರನ್ನೂ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ನುಡಿದಂತೆ ನಡೆಯುತ್ತೇವೆ
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆಯನ್ನು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾವು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಅನುದಾನವನ್ನು ಹೆಚ್ಚಿಸುವಂತೆ ಒತ್ತಡ ಹೇರಬೇಕು ಎಂದು ತಿಳಿಸಿದರು.




