ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ, ವಿದ್ಯಾರ್ಥಿನಿ ಹತ್ಯೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಡಾ. ಜಿ.ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಎಬಿವಿಪಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಆರೋಪಿ ಹಾಡಹಗಲೇ ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿ ನೇಹಾಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಇಂತಹ ಘಟನೆಗಳಿಂದಾಗಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಭಯಪಡುವ ವಾತಾವರಣವಿದೆ. ಹತ್ಯೆ ಆರೋಪಿಗೆ ಕಣಿಣ ಶಿಕ್ಷೆಯನ್ನು ನೀಡುವ ಮೂಲಕ ಇಂತಹ ಘಟನೆ ಮರುಕಳಿದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ನೇಹಾ ಕೊಲೆಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ಒಂದು ಹಂತದಲ್ಲಿ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆ ಹಿನ್ನೆಲೆಯಲ್ಲಿ ನೂರಾರು ಎಬಿವಿಪಿ ಕರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ