
ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಅಲ್ಲಿನ ಸರ್ಕಾರ ಸೋಷಿಯಲ್ ಮೀಡಿಯಾ ನಿಷೇಧ ಮಾಡಿದ್ದು, ಇದನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ.
ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧ ಹಿಂಪಡೆಯಿರಿ, ದೇಶದಲ್ಲಿ ವ್ಯಾಪಿಸಿರುವ ಭ್ರಷ್ಟಾಚಾರ ಕೊನೆಗೊಳಿಸಿ ಎಂದು ಆಗ್ರಹಿಸಿ ಯುವಜನತೆ ಪ್ರತಿಭಟನೆ ಪ್ರಾರಂಭಿಸಿದ್ದು, ರಾಜಧಾನಿ ಕಠ್ಮಂಡುವಿನಲ್ಲಿ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದೆ.
ಡಮಾಕ್ ಚೌಕ್ ನಿಂದ ಪುರಸಭೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೇ ಸುಮ್ಮನಾಗದೇ ಕಚೇರುಗೆ ನುಗ್ಗಿ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು ಸಿಡಿಸಿದ್ದಾರೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಇದರಿಂದ ಕಠ್ಮಂಡುವಿನಲ್ಲಿ ಪ್ರತಿಭಟನೆ ಮತ್ತಷ್ಟು ಭುಗಿಲೆದ್ದಿದೆ.
ಪ್ರತಿಭಟನಾಕಾರರು ಸಿಕ್ಕ ಸಿಕ್ಕ ಬೈಕ್, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸಂಸತ್ ಭವನದ ಆವರಣಕ್ಕೆ ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಜಲಫಿರಂಗಿ, ಜೀವಂತ ಗುಂಡಿನ ದಾಳಿ ನಡೆಸಿದ್ದಾರೆ. ಕಂಡಲ್ಲಿ ಗುಂಡು ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿಭಟನೆ, ಹಿಂಸಾಚಾರದಲ್ಲಿ 14 ಜನರು ಸಾವನ್ನಪ್ಪಿದ್ದು, 87ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.