*ರೇಣುಕಾಸ್ವಾಮಿ ಕೊಲೆ ಕೇಸ್ಗೆ ಹೊಸ ತಿರುವು*: *ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ವಿನಯ್!*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆ ಚುರುಕುಗೊಂಡಿದೆ. 10ನೇ ಆರೋಪಿ ವಿನಯ್ ಅವರು ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಇದೇ ವೇಳೆ, ಪವಿತ್ರಾ ಗೌಡ ಅವರ ಜೈಲಿನ ಸೌಲಭ್ಯ ಕುರಿತ ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.
ಈ ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್ ರಾವ್ ಈಗಾಗಲೇ ಮಾಫಿ ಸಾಕ್ಷಿಯಾಗಿದ್ದಾರೆ. ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಆದರೆ, ಇತ್ತೀಚೆಗೆ ಅವರ ಪರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿದರು. ಇದನ್ನು ಪರಿಗಣಿಸಿದ 59ನೇ ಸಿಸಿಎಚ್ ನ್ಯಾಯಾಲಯ, ವಿನಯ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಇನ್ನೊಂದೆಡೆ, ಆರೋಪಿ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೂಕ್ತ ಸೌಲಭ್ಯ ಹಾಗೂ ವ್ಯವಸ್ಥೆ ಕಲ್ಪಿಸಿಕೊಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜೈಲಿನ ಪರಿಸ್ಥಿತಿ ಮತ್ತು ತಮ್ಮ ಅಹವಾಲುಗಳನ್ನು ನ್ಯಾಯಾಧೀಶರೇ ಖುದ್ದಾಗಿ ಪರಿಶೀಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 59ನೇ ಸಿಸಿಎಚ್ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿದೆ.
ಇದೇ ಪ್ರಕರಣದಲ್ಲಿ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಅವರ ಜಾಮೀನು ಅರ್ಜಿಗಳ ವಿಚಾರಣೆಯೂ ಪೂರ್ಣಗೊಂಡಿದೆ. ಈ ಅರ್ಜಿಗಳ ಕುರಿತು ಅಕ್ಟೋಬರ್ 17ರಂದು ತೀರ್ಪು ನೀಡಲು ನ್ಯಾಯಾಲಯ ನಿರ್ಧರಿಸಿದೆ. ಪ್ರಕರಣದ ಮುಂದಿನ ವಿಚಾರಣೆಗೆ ಸಾಕ್ಷಿಗಳ ಹಾಜರಾತಿ ಖಚಿತಪಡಿಸಿಕೊಳ್ಳಲು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ಪುನೀತ್ ಅವರಿಗೆ ಸಮನ್ಸ್ ನೀಡಲಾಗಿದೆ. ಮತ್ತೊಬ್ಬ ಸಾಕ್ಷಿ ಕಿರಣ್ ಅವರು ಅಕ್ಟೋಬರ್ 28ರಂದು ಹಾಜರಾಗಬೇಕು ಎಂದು ಸೂಚಿಸಲಾಗಿದೆ. ಸೆಕ್ಯುರಿಟಿ ಗಾರ್ಡ್ ನರೇಂದ್ರ ಸಿಂಗ್ ಅವರಿಗೆ ಅಕ್ಟೋಬರ್ 29ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




