Kannada NewsKarnataka NewsLatest

*ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶ ನಿರಾಕರಣೆ*: *ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಜೆಡಿಎಸ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ದೇವಾಲಯಕ್ಕೆ ಭೇಟಿ ನೀಡುವ ಮಾಹಿತಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ, ಅವರು ಆಗಮಿಸುವ ವೇಳೆಗೆ ದೇವಾಲಯಕ್ಕೆ ಬೀಗ ಹಾಕಲಾಗಿತ್ತು. ಹೀಗಾಗಿ ನಿಖಿಲ್ ದೇವರ ದರ್ಶನ ಪಡೆಯದೆ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬುವವರು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ. ನಿಖಿಲ್ ಭೇಟಿ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎಂಬುದು ಜೆಡಿಎಸ್ ನಾಯಕರ ಆರೋಪವಾಗಿದೆ.

ಈ ಬೆಳವಣಿಗೆಯಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಕಾಂಗ್ರೆಸ್‌ಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ವಿಚಾರವೂ ಎರಡೂ ಪಕ್ಷಗಳ ಕಾರ್ಯಕರ್ತರ ನಡುವಿನ ಗಲಾಟೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಈ ಘಟನೆ ಕುರಿತು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿ, ದೇವಾಲಯಕ್ಕೆ ಬೀಗ ಹಾಕಿರುವುದು ತಪ್ಪು ಎಂದು ಖಂಡಿಸಿದ್ದಾರೆ.

“ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ರೀತಿ ನಡೆದುಕೊಳ್ಳಬಾರದು. ಇಂತಹ ಘಟನೆಗಳಿಗೆ ನಾನು ಎಂದಿಗೂ ಪ್ರಚೋದನೆ ನೀಡುವುದಿಲ್ಲ. ನನಗೂ ಇಂತಹ ಘಟನೆಗಳು ಇಷ್ಟವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯ ದೇವಾಲಯಕ್ಕೆ ಬೀಗ ಹಾಕಿದ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಎರಡೂ ಪಕ್ಷಗಳ ನಡುವಿನ ವಾಗ್ವಾದಕ್ಕೆ ಮತ್ತಷ್ಟು ತಿರುವು ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button