*ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ ವಿವಾದ*: *ಕಾಂಗ್ರೆಸ್ ಕಾರ್ಯಕರ್ತರಿಂದ ಬಹಿರಂಗ ಕ್ಷಮೆಯಾಚನೆ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಿಸಿದ ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ದೇವಾಲಯಕ್ಕೆ ಬೀಗ ಹಾಕಿದ ಆರೋಪ ಎದುರಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ದೇಗುಲದ ಮುಂದೆಯೇ ನಿಂತು ನಿಖಿಲ್ ಕುಮಾರಸ್ವಾಮಿ ಹಾಗೂ ರಾಜ್ಯದ ಜನತೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮದ ವೇಳೆ ಘಟನೆ ನಡೆದಿತ್ತು. ನಿಖಿಲ್ ಕುಮಾರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದಾಗ ಗೇಟ್‌ಗೆ ಬೀಗ ಹಾಕಲಾಗಿತ್ತು. ಇದರಿಂದ ದೇವರ ದರ್ಶನ ಪಡೆಯದೆ ಅವರು ವಾಪಸ್ ತೆರಳಿದ್ದರು.
ಘಟನೆ ರಾಜ್ಯಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಅನಿಲ್, ರವಿ ಸೇರಿದಂತೆ ಇತರರು ದೇವಾಲಯದ ಮುಂದೆ ಬಂದು ತಮ್ಮ ಕಡೆಯಿಂದ ಸ್ಪಷ್ಟನೆ ನೀಡಿದ್ದಾರೆ. ನಿಖಿಲ್ ಆಗಮಿಸುವ ಮುನ್ನ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರು ಆಯೋಜಕರ ಮೇಲೆ ಹಲ್ಲೆ ಮಾಡಲು ಮುಂದಾದರು. ಅವರಿಂದ ರಕ್ಷಣೆ ಪಡೆಯುವ ಉದ್ದೇಶದಿಂದ ದೇವಾಲಯದ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದೆವು. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇರಲಿಲ್ಲ ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ಅವರಲ್ಲಿ ಕ್ಷಮೆಯಾಚಿಸಿರುವ ಕಾರ್ಯಕರ್ತರು, ಮುಂದೆ ಅವರು ಯಾವಾಗ ಗ್ರಾಮಕ್ಕೆ ಬಂದರೂ ತಾವೇ ಮುಂದೆ ನಿಂತು ಸ್ವಾಗತಿಸುವುದಾಗಿ ಹೇಳಿದ್ದಾರೆ.
ಇನ್ನು ನಿಖಿಲ್ ಭೇಟಿ ಸಂದರ್ಭದಲ್ಲಿ ನಡೆದ ಘಟನೆಯ ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು.
ಒಟ್ಟಿನಲ್ಲಿ, ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಆರೋಪದಿಂದ ಆರಂಭವಾದ ವಿವಾದ ಇದೀಗ ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚನೆಯೊಂದಿಗೆ ಮತ್ತೊಂದು ತಿರುವು ಪಡೆದುಕೊಂಡಿದೆ.



