ಸ್ಮಾರಕ ಬೇಡ…. ಚಿತಾ ಭಸ್ಮವನ್ನು ನದಿಯಲ್ಲಿ ವಿಸರ್ಜಿಸಿ… ಮಂಗಳವಾರ ಸಂಜೆ ಅಂತ್ಯಕ್ರಿಯೆ

 

ಪ್ರಗತಿವಾಹಿನಿ ಸುದ್ದಿ, ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳ ಅಂತಿಮ ಸಂಸ್ಕಾರ ಮಂಗಳವಾರ ಸಂಜೆ ನಡೆಯಲಿದ್ದು, ಅಲ್ಲಿಯವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸೋಮವಾರ ಸಂಜೆ 6 ಗಂಟೆಗೆ ಇಹಲೋಕ ತ್ಯಜಿಸಿದ ಶ್ರೀಗಳ ಅಂತಿಮ ದರ್ಶನಕ್ಕೆ ರಾತ್ರಿಯಿಡೀ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆಯವರೆಗೂ ಮೆರವಣಿಗೆ ಮಾಡಿ ಅಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಂಜೆ 5 ಗಂಟೆಗೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

 

ಸ್ಮಾರಕ ಬೇಡ

ತಮ್ಮ ಸ್ಮಾರಕವನ್ನು ನಿರ್ಮಾಣ ಮಾಡಬಾರದು, ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಿ, ಚಿತಾಭಸ್ಮವನ್ನು ನದಿಯಲ್ಲಿ ವಿಸರ್ಜನೆ ಮಾಡಬೇಕು ಎಂದು ಅವರು 8 ವರ್ಷಗಳ ಹಿಂದೆ ವಿಲ್ ಬರೆದಿಟ್ಟಿದ್ದರು.

 

ಶಾಲೆ  ಕಾಲೇಜಿಗೆ ರಜೆ

 

ಸಿದ್ದೇಶ್ವರ ಶ್ರೀಗಳ ಅಗಲುವಿಕೆಯ ಹಿನ್ನೆಲೆಯಲ್ಲಿ ಮಂಗಳವಾರ ವಿಜಯಪುರ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

10 ಲಕ್ಷ ಜನರ ನಿರೀಕ್ಷೆ

 

ಶ್ರೀಗಳ ಅಂತಿಮ ದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದ್ದು ಎಲ್ಲರಿಗೂ ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ. ರಾತ್ರಿಯಿಂದಲೇ ಸೇರಿರುವ ಎಲ್ಲ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಸೈನಿಕ ಶಾಲೆ ಆಆವರಣದಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

 

ಗಣ್ಯರ ಸಂತಾಪ

ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸ್ವಾಮೀಜಿಗಳ ಜೊತೆಗಿನ ಫೋಟೋದೊಂದಿಗೆ ಟ್ವೀಟ್ ಮಾಡಿದ್ದಾರೆ.

 

ಮುಖ್ಯಮಂತ್ರಿ ಆಗಮನ

ಶ್ರೀಗಳ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.  ಮುಖ್ಯಮಂತ್ರಿಗಳ ಮಧ್ಯಾಹ್ನ 2 ಗಂಟೆಗೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಮಂಗಳವಾರ ಸಂಜೆ ನಡೆಯುವ ಅಂತ್ಯಸಂಸ್ಕಾರದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದ್ದು ಭಾರಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button